

ಅರಕಲಗೂಡು: ತಾಲೂಕಿನ ಹಂಡ್ರಂಗಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಕಾಮಗಾರಿಗೆ ಸೋಮವಾರ ಶಾಸಕ ಎ. ಮಂಜು ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿ, ಕಟ್ಟಡ ನಿರ್ಮಾಣಕ್ಕೆ ಶಾಸಕರ ನಿಧಿಯಡಿ 5 ಲಕ್ಷ ರೂ. ನೀಡಲಾಗುವುದು. ರೈತರಿಗೆ ಅನುಕೂಲವಾಗುವಂತೆ ಕೃಷಿ ಪತ್ತಿನ ಸಂಘದಲ್ಲೇ ರಾಸಾಯನಿಕ ಗೊಬ್ಬರ ಮಾರಾಟ ಮಾಡಲು ಮುಂದಾದರೆ ಸಹಕಾರ ನೀಡುವುದಾಗಿ ತಿಳಿಸಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ.ಜೆ. ಕುಮಾರ್ ಮಾತನಾಡಿ, ಕಳೆದ 22 ವರ್ಷಗಳಿಂದ ಶಾಲಾ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಘಕ್ಕೆ ಈಗ 20 ಲಕ್ಷ ರೂ. ವೆಚ್ಚದಲ್ಲಿ ನೂತನ ಕಟ್ಟಡ ಸ್ಥಾಪಿಸಲು ಅಂದಾಜಿಸಲಾಗಿದೆ ಎಂದರು.
ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ. ಸತೀಶ್, ಬ್ಯಾಂಕ್ ನಿರ್ದೇಶಕರು, ಅಧಿಕಾರಿಗಳು, ಗ್ರಾಮಸ್ಥರು ಇದ್ದರು.