

ಆನೇಕಲ್: ತಾಲೂಕಿನಲ್ಲಿ 1,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಶ್ರೀದಲ್ಲಿಯೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.
ಚಂದಾಪುರ ಸೂರ್ಯ ಸಿಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ದಾಖಲೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ತಾಲೂಕು ವೇಗವಾಗಿ ಬೆಳೆಯುತ್ತಿದೆ. ಆದ್ದರಿಂದ ತಾಲೂಕಿನ ಎಲ್ಲ ಗ್ರಾಮಗಳಿಗೂ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದರು. ಬೊಮ್ಮಸಂದ್ರದವರೆಗೂ ಮೆಟ್ರೋ ರೈಲು ಯೋಜನೆ ದೊರೆತಿದ್ದು, ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗುತ್ತಿದೆ. ಮೆಟ್ರೋ ಯೋಜನೆಯನ್ನು ಅತ್ತಿಬೆಲೆವರೆಗೂ ವಿಸ್ತರಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ದೊರೆಯುವ ವಿಶ್ವಾಸವಿದೆ ಎಂದರು.
ಆನೇಕಲ್ನಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಿಸಲು ಕಂದಾಯ ಇಲಾಖೆ ಅನುಮೋದನೆ ನೀಡಿದ್ದು, ಶ್ರೀದಲ್ಲಿ ಭೂಮಿ ಪೂಜೆ ನೆರವೇರಿಸಲಾಗುವುದು. ಪಟ್ಟಣದಲ್ಲಿ 17.4 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನ ಮುಗಿಯುವ ಹಂತದಲ್ಲಿದ್ದು, ಶ್ರೀದಲ್ಲಿ ಮುಖ್ಯಮಂತ್ರಿಗಳು ಭವನ ಉದ್ಘಾಟಿಸಲಿದ್ದಾರೆ ಎಂದರು. ಆನೇಕಲ್ ಚಂದಾಪುರ ಮುಖ್ಯ ರಸ್ತೆ ಅಭಿವೃದ್ಧಿಗಾಗಿ 20 ಕೋಟಿ ರೂ. ಮೀಸಲಿಡಲಾಗಿದೆ. ಭಾರಿ ಮಳೆ ಮತ್ತು ಯುಜಿಡಿ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ರಸ್ತೆ ಕೆಲಸ ಕುಂಠಿತವಾಗಿದೆ. ಮಳೆ ನಿಂತ ತಕ್ಷಣ ಡಾಂಬರೀಕರಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ವಿನಾಕಾರಣ ಬಿಜೆಪಿಯವರು ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಆರೋಪ ಮಾಡುತ್ತಿರುವುದು ಖಂಡನೀಯ. ವಿರೋಧ ಪಕ್ಷಗಳು ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಶಾಸಕ ಶಿವಣ್ಣ ಹೇಳಿದರು.
ಅಪಪ್ರಚಾರ ಮಾಡುವವರ ವಿರುದ್ಧ ಮಾನನಷ್ಟ ಮೊಕ್ಕದ್ದಮೆ: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭ್ರಷ್ಟಾಚಾರದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಲಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದವರ ವಿರುದ್ಧ ಮಾನನಷ್ಟ ಮೊಕ್ಕದ್ದಮೆ ಕೂಡಲು ಸಿದ್ಧತೆ ನಡೆಸಲಾಗಿದೆ. ದಾಖಲೆಗಳಿಲ್ಲದೆ ಮತ್ತು ಅಭಿವೃದ್ಧಿಯನ್ನು ಸಹಿಸದೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.