

ಮಂಡ್ಯ: ಜಿಲ್ಲೆಯಲ್ಲಿ ಜ.19 ಹಾಗೂ ಜ.25ರಂದು ನಡೆಯಲಿರುವ ಗ್ರೂಪ್ ಬಿ ವೃಂದದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 19ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಹಾಗೂ 25ರಂದು ಮಧ್ಯಾಹ್ನ 3 ರಿಂದ 5 ರವರೆಗೆ ನಿರ್ದಿಷ್ಟ ವಿಷಯದ ಬಗ್ಗೆ ಪರೀಕ್ಷೆ ನಡೆಯಲಿದೆ. ಮಂಡ್ಯ ವಿಶ್ವವಿದ್ಯಾಲಯದಲ್ಲಿ ಎಂದು ಕೇಂದ್ರ, ಸರ್ಕಾರಿ ಮಹಿಳಾ ಕಾಲೇಜು, ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು(ಕಲ್ಲು ಕಟ್ಟಡ) ಒಟ್ಟು 4 ಕೇಂದ್ರದಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. 19ರಂದು ಒಟ್ಟು 2,887 ಹಾಗೂ 25ರಂದು 3.127 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.
ಪರೀಕ್ಷೆ ನಡೆಯುವ ದಿನ ಕೇಂದ್ರದಲ್ಲಿ ಅಭ್ಯರ್ಥಿ ಹಾಗೂ ಸಿಬ್ಬಂದಿ ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು. ಅಂತೆಯೇ ಯಾರೂ ಆಕ್ಷೇಪಾರ್ಹ ವಸ್ತು ತೆಗೆದುಕೊಂಡು ಹೋಗಬಾರದು. ಕೇಂದ್ರದಿಂದ 200 ಮೀಟರ್ ವ್ಯಾಪ್ತಿಯಲ್ಲಿ ಸುತ್ತಮುತ್ತಲಿರುವ ಜೆರಾಕ್ಸ್ ಮತ್ತು ಸೈಬರ್ ಕೇಂದ್ರ ಮುಚ್ಚುವಂತೆ ಆದೇಶ ಹೊರಡಿಸಲಾಗುವುದು. ಪ್ರಶ್ನೆಪತ್ರಿಕೆ ತೆಗೆದುಕೊಂಡು ಹೋಗುವಾಗ ಹಾಗೂ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ನಿಗದಿತ ದಿನದಂದು ವಿದ್ಯುತ್ ಅಡಚಣೆ ಉಂಟಾಗದಂತೆ ಸೆಸ್ಕಾಂನಿಂದ ನೋಡಿಕೊಳ್ಳಬೇಕು. ಒಟ್ಟಾರೆ ಯಾವುದೇ ಲೋಪದೋಷ ಉಂಟಾಗದ ರೀತಿ ಬಹಳ ಎಚ್ಚರಿಕೆಯಿಂದ ಹಾಗೂ ಜಾಗೃತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಮೇಗೌಡ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.