

ಮಡಿಕೇರಿ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳ ಸಂಬಂಧ ಗ್ಯಾರಂಟಿ ಸಮಾವೇಶ ಮಾ.೧೪ ರಂದು ಮಡಿಕೇರಿ ನಗರದಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಜತೆ ಚರ್ಚಿಸಿದ ಜಿಲ್ಲಾಧಿಕಾರಿ, ಉಪ ಮುಖ್ಯಮಂತ್ರಿರವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸಲಹೆ ಮಾಡಿದರು.
ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಸೇರಿದಂತೆ ಹಲವು ಯೋಜನೆಗಳ ಫಲಾನುಭವಿಗಳ ಸಮಾವೇಶವು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಗಣಪತಿ, ಆಹಾರ ಇಲಾಖೆ ಶಿರಸ್ತೆದಾರರಾದ ವೀಣಾ, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ಮೆಹಬೂಬ್ ಅಲಿ ಇತರರು ಇದ್ದರು.