ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

Guarantee Samavesha CM Siddaramaiah speech mandya
Published on

ಮಂಡ್ಯ: ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ ತೀರ್ಮಾನ ಮಾಡಿದ್ದಾರೆ. ಮಂಡ್ಯ ಜನರೂ ಕೂಡ ಸುಳ್ಳು ಭರವಸೆ ನೀಡಿದ್ದರೂ, ದಾರಿ ತಪ್ಪಿಸುವ ಕೆಲಸ ಮಾಡಿದ್ದರೂ ಸರಿಯಾದ ತೀರ್ಮಾನವನ್ನೇ ಮಾಡಿದ್ದಾರೆ ಎಂದರು.

ಚುನಾವಣಾ ಪೂರ್ವದಲ್ಲಿ ನೀಡಿದ್ದ ಅನೇಕ ಭರವಸೆಗಳ ಪೈಕಿ ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತಂದೆವು. ಪ್ರಮಾಣವಚನ ಸ್ವೀಕಾರ ಮಾಡಿದ ದಿನವೇ 5 ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದೆವು. ರಾಜ್ಯದ 3.50 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾದ ಶಕ್ತಿ ಯೋಜನೆಗೆ ಚಾಲನೆ ನೀಡಿದೆವು. 50 ರಿಂದ 60 ಲಕ್ಷ ಮಹಿಳೆಯರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.

ಕೃಷಿ ಇಲಾಖೆಗೆ 600 ಕೋಟಿ ರೂ.ಗಳನ್ನು ಬೆಳೆ ವಿಮೆಗೆ ನೀಡಲಾಗಿದ್ದು, ಇನ್ನೂ 800 ಕೋಟಿ ರೂ.ಗಳನ್ನು ನೀಡಲಾಗುವುದು. 33.25 ಲಕ್ಷ ರೈತರಿಗೆ 631 ಕೋಟಿ ರೂ.ಗಳನ್ನು ತಲಾ 2000 ರೂ.ಗಳ ಬೆಳೆ ಪರಿಹಾರಕ್ಕೆ ನೀಡಿದ್ದೇವೆ. ಬಿಜೆಪಿ ಮೇಲೆ ಜೆಡಿಎಸ್ ಅವರಿಗೆ ಬಹಳ ಪ್ರೀತಿ ಉಂಟಾಗಿದೆ. ನಮ್ಮ ಗ್ಯಾರಂಟಿಗಳ ಬಗ್ಗೆ ಟೀಕಿಸುತ್ತಾರೆ. ಜನರಿಗೆ ಸತ್ಯ ತಿಳಿಸದೆ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾವು ನಿಮ್ಮ ಪರ ಇದ್ದೇವೆ. ಮಂಡ್ಯ ಜಿಲ್ಲೆಯನ್ನು ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು. 500 ಕೋಟಿ ರೂ.ಗಳನ್ನು ಜಿಲ್ಲೆಗೆ ನೀಡಲಾಗುತ್ತಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ವ್ಯವಸಾಯದ ಮೇಲೆ ಅವಲಂಬಿತ ಜನ ಹೆಚ್ಚಿದ್ದು, ಅಭಿವೃದ್ಧಿ ಮಾಡಲು ಪಣ ತೊಟ್ಟಿದ್ದೇವೆ. ಯಾರೂ ಏನೇ ಹೇಳಿದರೂ ಕೆಲಸ ಮಾಡಿದವರನ್ನು ಗೆಲ್ಲಿಸಬೇಕು ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ರವಿಕುಮಾರ್ ಗಣಿಗ, ರಮೇಶ ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net