ಗ್ಯಾರಂಟಿ ತಲುಪಿದರಷ್ಟೇ ಯೋಜನೆ ಯಶಸ್ವಿ: ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ

Guarantee Scheme Progress Review Meeting Mandya
Published on

ಮಂಡ್ಯ: ರಾಜ್ಯಸರ್ಕಾರ ಗ್ಯಾರಂಟಿ ಕಾರ್ಯಕ್ರಮ ಫಲಾನುಭವಿಗೆ ತಲುಪಿದಾಗ ಮಾತ್ರ ಯೋಜನೆ ಯಶಸ್ವಿಯಾದಂತೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರ್ಹ ಫಲಾನುಭವಿಗೆ ಯೋಜನೆಗಳನ್ನು ತಲುಪಿಸಲು ಪ್ರಾಧಿಕಾರವು ಸಹ ಶ್ರಮವಹಿಸಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಗೃಹಲಕ್ಷ್ಮೀ ಯೋಜನೆಯಿಂದ ಅನೇಕ ಕುಟುಂಬಗಳು ಸಬಲವಾಗಿವೆ. ಜಿಲ್ಲೆಯಲ್ಲಿ ಶೇ.100ರಷ್ಟು ಅರ್ಹ ಮಹಿಳೆಯರಿಗೆ ಯೋಜನೆ ತಲುಪಿಸುವುದು ಅತಿ ಮುಖ್ಯ. ಈಗಾಗಲೇ ಡಿಸೆಂಬರ್ ಮಾಹೆಯವರೆಗೂ ಗೃಹಲಕ್ಷ್ಮೀ ಅನುದಾನ ಮಂಜೂರು ಮಾಡಲಾಗಿದೆ. ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾಲ ಕಾಲಕ್ಕೆ ಗೃಹಲಕ್ಷ್ಮೀ ಹಣ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಮಾತ್ರವಲ್ಲದೆ ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 7 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದು, ಡಿಸೆಂಬರ್ ಮಾಹೆವರೆಗೆ 402 ಕೋಟಿ ರೂಗೂ ಹೆಚ್ಚು ಅನುದಾನ ನೀಡಲಾಗಿದೆ. ಡಿಸೆಂಬರ್ ಮಾಹೆಗೆ ಸಂಬಂಧಿಸಿದಂತೆ 23.06 ಕೋಟಿ ರೂ ಪಡಿತರ ಚೀಟಿಯ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಸರ್ಕಾರದ ನಿರ್ದೇಶನದಂತೆ ಫೆಬ್ರವರಿ ಮಾಹೆಯಿಂದ ಹಣದ ಬದಲು 15 ಕೆ.ಜಿ ಅಕ್ಕಿಯನ್ನೇ ನೀಡಲಾಗುವುದು. ಆಹಾರ ವಿತರಣೆಗೆ ಸಂಬಂಧಿಸಿದಂತೆ ತೂಕದಲ್ಲಿ ವ್ಯತ್ಯಾಸ ಕಂಡು ಬಂದ ಅಂಗಡಿಯ ಮಾಲೀಕನ ಮೇಲೆ ಕ್ರಮ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಅನೇಕ ಕಡೆ ನ್ಯಾಯಬೆಲೆ ಅಂಗಡಿ ಮಾಲೀಕರು ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅಧಿಕಾರಿಗಳು ಈಗಾಗಲೇ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ಹಣ ವಸೂಲಿ ಮಾಡದಂತೆ ಸೂಚನೆ ನೀಡಿದ್ದಾರೆ. ಅದನ್ನು ಮೀರಿ ಹಣ ವಸೂಲಿ ಮಾಡಿದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಮುಖ್ಯಯೋಜನಾಧಿಕಾರಿ ಧನುಷ್, ಪ್ರಾಧಿಕಾರದ ಉಪಾಧ್ಯಕ್ಷ ಕೆ.ಸಿ.ಪ್ರಶಾಂತ್‌ಬಾಬು, ಸದಸ್ಯರಾದ ವೀಣಾ ಶಂಕರ್, ರುದ್ರಪ್ಪ, ಮಹೇಶ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಕುಮಾರ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net