ಗ್ಯಾರಂಟಿಗೆ ಐದು ವರ್ಷ ವ್ಯಾಲಿಡಿಟಿ: ಸಚಿವ ಸುಧಾಕರ್ ಭರವಸೆ

141
Published on

ಹಿರಿಯೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆ ಲಾಭ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು, ಸಮರ್ಪಕ ಅನುಷ್ಠಾನದಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಸಚಿವ ಡಿ.ಸುಧಾಕರ್ ಹೇಳಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ- ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗೆ ಅಭೂತಪೂರ್ವ ಜನ ಬೆಂಬಲ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ಸ್ಥಗಿತವಾಗುವುದಿಲ್ಲ. ಯೋಜನೆಗಳಿಗಾಗಿ ವಾರ್ಷಿಕ 60 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಮಹಿಳೆಯರು, ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಸೇರಿ ನಿರ್ಗತಿಕರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಸಹಕರಿಸಬೇಕು ಎಂದರು.

ವಿವಿಧ ತಾಂತ್ರಿಕ ಕಾರಣಗಳಿಂದ ಯೋಜನೆಯಿಂದ ಹೊರಗೆ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ ಸೇರ್ಪಡೆ ಮಾಡಬೇಕು. ಗ್ರಾಪಂ ಮಟ್ಟದಲ್ಲಿ ಸಮಿತಿ ಸಭೆ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಹಸೀಲ್ದಾರ್ ರಾಜೇಶ್‌ಕುಮಾರ್, ತಾಪಂ ಇಒ ಸತೀಶ್‌ಕುಮಾರ್, ಬೆಸ್ಕಾಂ ಎಇಇ ಪೀರ್‌ಸಾಬ್, ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ಅಶೋಕ್, ತಿಪ್ಪಮ್ಮ, ಮಹಂತೇಶ್, ಖಾದಿ ರಮೇಶ್, ಗುರು ಪ್ರಸಾದ್, ಜ್ಞಾನೇಶ್, ಹೇಮಂತ್, ಬಂಡೀ ಈರಣ್ಣಗೌಡ, ಕಾಂಚನ, ಸಿಡಿಪಿಒ ರಾಘವೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net