

ಶಿವಮೊಗ್ಗ: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಶಿವಮೊಗ್ಗ ಜಿಲ್ಲೆ ಶೇ. 85ರಷ್ಟು ಪ್ರಗತಿ ಸಾಧಿಸಿದ್ದು, ಪ್ರಾಧಿಕಾರದಿಂದ ಅನೇಕ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಹೇಳಿದರು.
ಗ್ಯಾರಂಟಿ ಯೋಜನೆಗಳ ವ್ಯಾಪ್ತಿಯಲ್ಲಿ ಸೇರ್ಪಡೆಯಾಗದೇ ಉಳಿದಿರುವ ಎಲ್ಲ ಅರ್ಹ ಫಲಾನುಭವಿಗಳನ್ನು ಪ್ರಾಧಿಕಾರದಿಂದ ಗುರುತಿಸಿ ಅವರಿಗೆ ಯೋಜನೆಗಳ ಲಾಭ ದೊರಕಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಅ. 1ರ ಸಂಜೆ 4ಕ್ಕೆ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷ ಸೂರಜ್ ಎಂ.ಎನ್.ಹೆಗ್ಡೆ ಭಾಗವಹಿಸುವರು. ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳುವರು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಬಿ.ಆರ್.ಶಿವಣ್ಣ, ಸದಸ್ಯರಾದ ಪ್ರಭಾ, ರಾಹುಲ್, ಶಿವಾನಂದ್, ಶಿವಮೊಗ್ಗ ತಾಲೂಕು ಅಧ್ಯಕ್ಷ ಎಚ್.ಎಂ.ಮಧು ಸುದ್ದಿಗೋಷ್ಠಿಯಲ್ಲಿದ್ದರು.