ಗುಡ್ಡೆಮನೆ ಅಪ್ಪಯ್ಯ ಗೌಡರ ಕೊಡುಗೆ ಅಪಾರ: ಎ.ಎಸ್.ಪೊನ್ನಣ್ಣ

guddemane appaiah
Published on

ಮಡಿಕೇರಿ: ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ವಾತಂತ್ರ್ಯ ಹೋರಾಟ ಮತ್ತು ಸಾಧನೆ ಸಾರ್ವಕಾಲಿಕ ದಾಖಲೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದೊಂದಿಗೆ ನಡೆದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆಯಲ್ಲಿ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆಗೆ ಪುಷ್ಪಗುಚ್ಚ ಅರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಗುಡ್ಡೆಮನೆ ಅಪ್ಪಯ್ಯ ಗೌಡರು ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದು, ಇವರನ್ನು ಸದಾ ಸ್ಮರಿಸುವಂತಾಗಬೇಕು ಎಂದ ಅವರು, ಗುಡ್ಡಗಾಡು ಪ್ರದೇಶ ಹೊಂದಿರುವ ಕೊಡಗು ಜಿಲ್ಲೆ ಸ್ವಾತಂತ್ರ್ಯ ಪೂರ್ವದಲ್ಲಿ ಹೇಗಿತ್ತು, ಸ್ವಾತಂತ್ರ್ಯ ನಂತರ ಯಾವ ರೀತಿ ಬೆಳವಣಿಗೆ ಹೊಂದಿದೆ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟ ಸಾಧ್ಯವಾಗಿದೆ. ಅಂತಹ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು, ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ವಾತಂತ್ರ್ಯ ಹೋರಾಟ ಮತ್ತು ಸಾಧನೆ ಸಾರ್ವಕಾಲಿಕ ದಾಖಲೆ ಎಂದು ಸ್ಮರಿಸಿದರು.

ಕಳೆದ ೧೫ ವರ್ಷಗಳಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿರುವಂತೆ ಇತಿಹಾಸ ಮರೆತವರು ಚರಿತ್ರೆ ಸೃಷ್ಟಿಸಲಾರರು ಎಂಬಂತೆ ಇತಿಹಾಸವನ್ನು ಸ್ಮರಿಸಬೇಕು. ಜೊತೆಗೆ ಮುಂದಿನ ಪೀಳಿಗೆಗೆ ಮಾಹಿತಿ ಮತ್ತು ಮಾರ್ಗದರ್ಶನ ಇರಬೇಕು ಎಂದು ಎ.ಎಸ್.ಪೊನ್ನಣ್ಣ ಪ್ರತಿಪಾದಿಸಿದರು.

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿರುವ ಗುಡ್ಡೆಮನೆ ಅಪ್ಪಯ್ಯ ಗೌಡರ ಕೊಡುಗೆ ಅಪಾರವಾಗಿದೆ. ಅವರ ತ್ಯಾಗ ಬಲಿದಾನವನ್ನು ಸದಾ ಸ್ಮರಿಸಬೇಕು. ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ಇಲ್ಲಿ ಹಾಡಿದ ಲಾವಣಿ ಹಾಡು ಭಾವಪೂರ್ಣವಾಗಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ, ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಪ್ರತಿನಿತ್ಯ ಸ್ಮರಿಸವಂತಾಗಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಗುಡ್ಡೆಮನೆ ಅಪ್ಪಯ್ಯ ಗೌಡರು ಸೇರಿದಂತೆ ಹಲವರು ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಆದರೆ ಇಂದು ನಾವುಗಳೇ ಕಚ್ಚಾಡುತ್ತಿದ್ದೇವೆ ಎಂದು ಡಾ.ಮಂತರ್ ಗೌಡ ಅವರು ಬೇಸರ ವ್ಯಕ್ತಪಡಿಸಿದ ಅವರು, ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ ಉದ್ಯಾನವನ ಸಮರ್ಪಕವಾಗಿ ಆಗಲಿ ಎಂದು ಶಾಸಕರು ಆಶಿಸಿದರು.

ವಿಶ್ರಾಂತ ಪ್ರಾಂಶುಪಾಲರು, ಇತಿಹಾಸ ಪ್ರಾಧ್ಯಾಪಕರಾದ ನಂಗಾರು ನಿಂಗರಾಜು ಮಾತನಾಡಿದರು. ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ಸಂತ ಮೈಕಲರ ಶಾಲೆಯ ಸ್ನೇಹ.ಕೆ.ಎಫ್(ಪ್ರ), ಸಂತ ಜೋಸೆಫರ ಶಾಲೆಯ ಲ್ಯಾನ್ಸಿ ಪೊನ್ನಮ್ಮ.ಟಿ.ಟಿ.(ದ್ವಿ), ಸಂತ ಜೋಸೆಫರ ಶಾಲೆಯ ರಿಧಿ.ಎಸ್.ನಾಯಕ್(ತೃ) ಬಹುಮಾನ ಪಡೆದರು.

ಇದಕ್ಕೂ ಮುನ್ನ ಬಳಿಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಹೊರಟು ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಕೋಟೆಗೆ ಆಗಮಿಸಿ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಗಲ್ಲಿಗೇರಿಸಿದ ಸ್ಥಳದಲ್ಲಿ ಪುಷ್ಪಗುಚ್ಚ ಸಮರ್ಪಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿಶ್ರಾಂತ ಪ್ರಾಂಶುಪಾಲರು, ಇತಿಹಾಸ ಪ್ರಾಧ್ಯಾಪಕರಾದ ನಂಗಾರು ನಿಂಗರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ಗೌಡ ಸಮಾಜಗಳ ಒಕ್ಕೂಟಗಳ ಅಧ್ಯಕ್ಷ ಆನಂದ ಕರಂದ್ಲಾಜೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಲಕ್ಷ್ಮೀ ನಾರಾಯಣ ಕಜೆಗದ್ದೆ, ಪ್ರಮುಖರಾದ ಸೂರ್ತಲೆ ಸೋಮಣ್ಣ, ಅಕಾಡೆಮಿ ಸದಸ್ಯರು ಇತರರು ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆಗೆ ಪುಷ್ಪಗುಚ್ಚ ಅರ್ಪಿಸಿ ಗೌರವ ನಮನ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net