ಮುಂದುವರಿಯಲಿದೆ ಗ್ಯಾರಂಟಿ ಯೋಜನೆ

IMG-20240625-WA0256
Published on

ಗುಂಡ್ಲುಪೇಟೆ: ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿದ್ದು, ಮುಂದಿನ 5 ವರ್ಷಗಳವರೆಗೂ ಮುಂದುವರಿಯಲಿವೆ ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಹೇಳಿದರು.

ಮಂಗಳವಾರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಸಭೆ ಹಾಗೂ ಮೇಲ್ವಿಚಾರಕಿಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿರೋಧ ಪಕ್ಷದವರು ನಮ್ಮ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳ ವಿರುದ್ಧ ಪದೇ ಪದೆ ಜನರಲ್ಲಿ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಮಾಡುತ್ತಿದ್ದಾರೆ. ಅದರೆ ಫಲಾನುಭವಿಗಳು ಇದರ ಬಗ್ಗೆ ಗಮನ ಕೊಡದಿರಿ ಎಂದು ಕಿವಿಮಾತು ಹೇಳಿದರು.

ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಈ ಗ್ಯಾರಂಟಿ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಗೊಳಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತೆರೆಯಲಾಗಿದೆ. ಈ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗದಿರುವ ಬಗ್ಗೆ ಪರಿಶೀಲಿಸಿ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ಹಣಕಾಸು ವರ್ಗಾವಣೆ ಅಗುವಂತೆ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದರು.

ತಾಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಹೇಮಾವತಿ ಮಾತನಾಡಿ, ತಾಲೂಕಿನ ವ್ಯಾಪ್ತಿಯಲ್ಲಿ ತಮ್ಮ ಇಲಾಖೆ ವತಿಯಿಂದ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿಯೋಜನೆಯ ಸಾಧನೆ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ಹಾಗೂ ಕ್ರೀಡೆಯಲ್ಲಿ ಪಾಲ್ಗೊಂಡು ವಿಜೇತರಾದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು. ತಹಸೀಲ್ದಾರ್ ರಮೇಶ್ ಬಾಬು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮಲಿಂಗಯ್ಯ, ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ, ಸಮಿತಿಯ ಅಧ್ಯಕ್ಷ ಹೊಂಗನೂರು ಚಂದ್ರು, ಉಪಾಧ್ಯಕ್ಷರಾದ ರಾಜಶೇಖರ್, ಪ್ರದೀಪ್ ಕುಮಾರ್, ಸದಸ್ಯರಾದ ಉಮಾಪತಿ, ಪ್ರದೀಪ್, ರವಿಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net