ಮಾಲವಿ ಜಲಾಶಯಕ್ಕೆ ಶೀಘ್ರ ನೀರು; ಶಾಸಕ ಭೀಮಾನಾಯ್ಕ ಮಾಹಿತಿ

26072022 hb halli news
Published on

60 ದಿನದೊಳಗೆ ಚಿಲವಾರು ಬಂಡಿ ಏತ ನೀರಾವರಿ ಯೋಜನೆ ಪೂರ್ಣ

ಹಗರಿಬೊಮ್ಮನಹಳ್ಳಿ: ಕ್ಷೇತ್ರದ ಬಹುದಿನದ ಬೇಡಿಕೆಯಾದ ಮಾಲವಿ ಜಲಾಶಯಕ್ಕೆ ನೀರೊದಗಿಸುವ ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಾಯೋಗಿಕ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವುದು ಸಂತಸ ತಂದಿದೆ ಎಂದು ಶಾಸಕ ಎಲ್.ಬಿ.ಪಿ. ಭೀಮಾನಾಯ್ಕ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ಮಾಲವಿ ಜಲಾಶಯಕ್ಕೆ ನೀರು ತರುವ ಯೋಜನೆ ಯಶಸ್ವಿಯಾಗುವುದಿಲ್ಲ ಎಂದು ತುಂಬಾ ಜನ ಲೇವಡಿ ಮಾಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕಾರವಧಿಯಲ್ಲಿ 150 ಕೋಟಿ ರೂ. ಅನುದಾನ ನೀಡಿ ಯೋಜನೆಗೆ ಚಾಲನೆ ನೀಡಿದ್ದರು. ಇದೀಗ ಕಾಮಗಾರಿ ಸಂಪೂರ್ಣ ಮುಗಿದು ನೀರು ಹರಿಸುವ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ. ಕೋವಿಡ್‌ನಿಂದಾಗಿ ಎರಡು ವರ್ಷ ಕಾಮಗಾರಿ ವಿಳಂಬವಾಯಿತು. ಇನ್ನೂ 60 ದಿನದೊಳಗೆ ಚಿಲವಾರು ಬಂಡಿ ಏತ ನೀರಾವರಿ ಯೋಜನೆ ಪೂರ್ಣಗೊಳ್ಳಲಿದೆ. ಕ್ಷೇತ್ರದ 30 ಕೆರೆಗೆ ನೀರುವ ತುಂಬಿಸುವ ಯೋಜನೆಗೆ ಶೀಘ್ರವೇ ಚಾಲನೆ ನೀಡಲಾಗುವುದು. ಕ್ಷೇತ್ರವನ್ನು ಸಂಪೂರ್ಣ ನೀರಾವರಿಯನ್ನಾಗಿ ಪರಿವರ್ತಿಸಲಾಗುವುದು ಎಂದರು.

ನಂದಿಪುರದ ಡಾ.ಮಹೇಶ್ವರ ಸ್ವಾಮೀಜಿ, ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯರು, ಹಾಲಸ್ವಾಮಿ ಮಠದ ಶ್ರೀ ಹಾಲಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪತ್ರಕರ್ತ ಶಶಿಕಾಂತ್, ಪುರಸಭೆ ಸದಸ್ಯ ಬಣಕಾರ ಸುರೇಶ್, ಡಿ.ಎಂ. ಅಜೀಜುಲ್ಲಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net