

ಹಾನಗಲ್ಲ: ದೇಶ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕವಾಗಿ ಪ್ರಗತಿ ಸಾಧಿಸುತ್ತಿದೆ. ತಾಲೂಕಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಸ್ವಂತ ಖರ್ಚಿನಲ್ಲಿ ಲ್ಯಾಪ್‌ಟಾಪ್ ವಿತರಿಸುತ್ತಿದ್ದೇನೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ಪಟ್ಟಣದ ಜನಸಂಪರ್ಕ ಕಚೇರಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು. ಇಂಜಿನಿಯರಿಂಗ್ ಸೇರಿ ವಿವಿಧ ತಾಂತ್ರಿಕ ಕೋರ್ಸ್‌ಗಳಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ತಾಲೂಕಿನ 37 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸಲಾಯಿತು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ತೋರಿ ಭವಿಷ್ಯ ರೂಪಿಸಿಕೊಂಡು ಇತರರಿಗೆ ಮಾದರಿಯಾಗಬೇಕು. ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಯಾವ ಕೊರತೆಯೂ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಪ್ರತಿಭಾನ್ವಿತರಿಗೆ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ ಎಂದರು. ರೋಶನಿ ಸಮಾಜ ಸೇವಾ ಸಂಸ್ಥೆ ನಿರ್ದೇಶಕಿ ಅನಿತಾ ಡಿಸೋಜಾ ಮಾತನಾಡಿದರು. ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಮಂಜು ಗೊರಣ್ಣನವರ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ಯುವ ಕಾಂಗ್ರೆಸ್ ಅಧ್ಯಕ್ಷ ಶಿವು ಭದ್ರಾವತಿ, ಶಿವು ತಳವಾರ, ಅಕ್ಕಿಆಲೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಶಿವೂರ, ಚಂದ್ರಪ್ಪ ಜಾಲಗಾರ, ಉಮೇಶ ಮಾಳಗಿ, ಮೇಕಾಜಿ ಕಲಾಲ, ಸುರೇಶ ನಾಗಣ್ಣನವರ, ರಾಮಚಂದ್ರ ಕಲ್ಲೇರ ಇದ್ದರು.