ಕೈ ಗೆಲುವಿಗೆ ಅಡ್ಡಿಯಾಗದು ದಿನೇಶ್ ಸ್ಪರ್ಧೆ: ಸುಂದರೇಶ್

Sundaresh
ಎಚ್.ಎಸ್. ಸುಂದರೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ
Published on

ಶಿವಮೊಗ್ಗ: ಸ್ವತಂತ್ರ ಅಭ್ಯರ್ಥಿ ಎಸ್.ಪಿ.ದಿನೇಶ್ ಸ್ಪರ್ಧೆಯಿಂದ ನೈಋತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಯಾವುದೇ ತೊಂದರೆಯಿಲ್ಲ ಎಂದು ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.

ದಿನೇಶ್ ಅವರಿಗೆ ಈ ಹಿಂದೆ ಎರಡು ಬಾರಿ ನೈಋತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧೆಗೆ ಕಾಂಗ್ರೆಸ್ ಪಕ್ಷ ಅವಕಾಶ ನೀಡಿತ್ತು. ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆಯನ್ನೂ ನೀಡಲಾಗಿತ್ತು. ಅವರು ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕಣಕ್ಕಿಳಿಯಬಾರದಿತ್ತು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬಿಜೆಪಿ ಅಭ್ಯರ್ಥಿ ವಿರುದ್ಧ ಮಾಜಿ ಶಾಸಕ ಕೆ.ರಘುಪತಿ ಭಟ್ ಪಕ್ಷೇತರರಾಗಿ ಕಣಕ್ಕಿಳಿದಿರುವುದು ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲವಾಗಿದೆ. ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದರು.
ಅಭ್ಯರ್ಥಿಗಳಿಬ್ಬರ ಪರವಾಗಿ ಶಿವಮೊಗ್ಗದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದೇವೆ. ಪ್ರಚಾರಕ್ಕೆಂದು ವಾರ್ಡ್ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಪ್ರತಿ ವಾರ್ಡ್‌ನಲ್ಲಿರುವ ಮತದಾರರನ್ನು ಗುರುತಿಸಿ, ಮನೆಗಳಿಗೆ ತೆರಳಿ ಅವರ ಮನವೊಲಿಸುತ್ತಿದ್ದೇವೆ ಎಂದು ಹೇಳಿದರು.
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಬಹುಮತವಿಲ್ಲ. ಯಾವುದೇ ಶಾಸನಗಳು ಜಾರಿಯಾಗಬೇಕಾದರೆ ಪರಿಷತ್‌ನಲ್ಲೂ ಒಪ್ಪಿಗೆ ಬೇಕಾಗುತ್ತದೆ. ಅಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ ಹೆಚ್ಚಾಗಬೇಕು. ಈ ಬಾರಿ ನಿಶ್ಚಿತವಾಗಿ ಕಾಂಗ್ರೆಸ್ ಶಕ್ತಿ ವೃದ್ಧಿಯಾಗಲಿದೆ. ಆಯನೂರು ಮಂಜುನಾಥ್ ಒಂದು ಸುತ್ತು ಪ್ರಚಾರ ಮಾಡಿದ್ದಾರೆ. ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಹೀಗಾಗಿ ಅವರ ಗೆಲುವಿನ ಬಗ್ಗೆ ಅನುಮಾನವಿಲ್ಲ. ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಶಿಕ್ಷಕರ ಸಮಸ್ಯೆಗಳನ್ನು ತಿಳಿದುಕೊಂಡಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಟಿ.ಎಸ್.ಚಂದ್ರಶೇಖರ್, ಗ್ಯಾರಂಟಿ ಅನುಷ್ಠಾನ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಪ್ರಮುಖರಾದ ಸೌಗಂಧಿಕಾ, ಎಚ್.ಎಂ.ಮಧು, ಜಿ.ಡಿ. ಮಂಜುನಾಥ್, ಚಿನ್ನಪ್ಪ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net