ಮಾದಪ್ಪನ ಸನ್ನಿಧಿಯಲ್ಲಿ ವಿಶೇಷ ಸೇವೆ

02 HANUR 2
Published on

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಾಗರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಸ್ವಾಮಿಗೆ ಎಣ್ಣೆಮಜ್ಜನ ಸಾಂಪ್ರದಾಯಿಕ ಸೇವೆ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಅಮಾವಾಸ್ಯೆ ಅಂಗವಾಗಿ ದೇಗುಲವನ್ನು ವಿವಿಧ ಪುಷ್ಪ, ತಳಿರು ತೋರಣದಿಂದ ಸಿಂಗರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರದಿಂದ ಸನ್ನಿಧಿ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ದೇಗುಲದಲ್ಲಿ ಸಂಜೆ 6.30 ರಿಂದ ರಾತ್ರಿ 8.30ರವರೆಗೆ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಬೇಡಗಂಪಣ ಸರದಿ ಅರ್ಚಕರು ಮಾದಪ್ಪನಿಗೆ ವಿವಿಧ ಅಭಿಷೇಕ ನೆರವೇರಿಸಿದರು. ಬಳಿಕ ಎಣ್ಣೆಮಜ್ಜನ ಸೇವೆ ನೆರವೇರಿಸಿ ಮಾದಪ್ಪನ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಯಿತು. ಧೂಪ, ದೀಪಧಾರತಿ ಹಾಗೂ ಮಹಾಮಂಗಳಾರತಿ ಬೆಳಗಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net