ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ

09 HANUR 1
Published on

ಹನೂರು: ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಆಗ್ರಹಿಸಿ ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಯಿಲನತ್ತ ಗ್ರಾಮದ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಪಟ್ಟಣದ ಪೊಲೀಸ್ ಠಾಣೆಗೆ ಸೋಮವಾರ ಮನವಿ ಸಲ್ಲಿಸಿದರು.


ಉಯಿಲನತ್ತ ಗ್ರಾಮದಲ್ಲಿ ಸುಮಾರು 100ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಕೂಲಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಆದರೆ, ಕಳೆದ ಮೂರ‌್ನಾಲ್ಕು ವರ್ಷದಿಂದ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಗ್ರಾಮದಲ್ಲಿ ನೆಮ್ಮದಿಯ ವಾತಾವರಣ ಇಲ್ಲದಂತಾಗಿದೆ. ನಿತ್ಯ ಕುಟುಂಬದಲ್ಲಿ ಗಲಾಟೆಗೆ ಕಾರಣವಾಗಿದೆ. ಕೆಲವರು ಕೂಲಿ ಹಣವನ್ನೆಲ್ಲ ಕುಡಿತಕ್ಕಾಗಿ ವ್ಯಯಿಸುತ್ತಿದ್ದು, ಜೀವನ ನಿರ್ವಹಣೆ ಕಷ್ಟವಾಗಿದೆ. ಇನ್ನು ಗ್ರಾಮದಲ್ಲೇ ಮದ್ಯ ಸಿಗುತ್ತಿರುವುದರಿಂದ ಕೆಲ ಯುವಕರು ಚಟಕ್ಕೆ ದಾಸರಾಗುತ್ತಿದ್ದಾರೆ. ಪರಿಣಾಮ ಗ್ರಾಮದಲ್ಲಿ ಅಶಾಂತಿ ನಿರ್ಮಾಣವಾಗಿದೆ ಎಂದು ಆತಂಕವ್ಯಕ್ತಪಡಿಸಿದರು.


ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಕುಟುಂಬಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮಹಿಳೆಯರು ಎಚ್ಚರಿಸಿದರು. ಎಎಸೈ ರವಿಕುಮಾರ್ ಮನವಿ ಸ್ವೀಕರಿಸಿ, ಈ ಬಗ್ಗೆ ಇನ್ಸ್‌ಪೆಕ್ಟರ್ ಸಂತೋಷ್ ಕಶ್ಯಪ್ ಅವರ ಗಮನಕ್ಕೆ ತಂದು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕೂಡಲೇ ಕಡಿವಾಣ ಹಾಕುವುದಾಗಿ ಭರವಸೆ ನೀಡಿದರು.

ಮಹಿಳಾ ಸಂಘದ ಸದಸ್ಯರಾದ ಸುಧಾಬಾಯಿ, ಗೌರಿ, ಸಣ್ಣಮ್ಮ, ಬಸಮ್ಮ, ಶೋಭಾ, ರತ್ನಾ, ಕೆಂಪಮ್ಮ, ಮಾದಮ್ಮ, ಮಾದೇವಮ್ಮ, ಚಿಕ್ಕಮುತ್ತಮ್ಮ, ರಾಜಮ್ಮ, ಲೀಲಾವತಿ, ನಾಗಮಣಿ ಶಶಿಕಲಾ, ಅಂಬಾರಿ ಬಾಯಿ, ಜಡೇಮಾದಮ್ಮ, ಮುದ್ದಮ್ಮ ಸೇರಿದಂತೆ 25ಕ್ಕೂ ಹೆಚ್ಚು ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net