

ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ಶಿಥಿಲಗೊಂಡಿದ್ದ ಓವರ್‌ಹೆಡ್ ಟ್ಯಾಂಕ್ ಅನ್ನು ಗುರುವಾರ ತೆರವುಗೊಳಿಸಲಾಯಿತು.
ಗ್ರಾಮದ ಸರ್ಕಾರಿ ಹಿರಿಯ ಶಾಲೆಯ ಮುಂಭಾಗದಲ್ಲಿ 11 ಕೆ.ವಿ. ಸಾಮರ್ಥ್ಯದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕಂಬ ಹಾಗೂ ಸಮೀಪದಲ್ಲೇ ಒವರ್‌ಹೆಡ್ ಇದ್ದು, 2 ವರ್ಷದಿಂದ ಸಂಪೂರ್ಣ ಶಿಥಿಲಗೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತ್ತು. ಇದರಿಂದ ಶಾಲೆಯ ಮಕ್ಕಳು ಸಂಚರಿಸಲು ಭಯಪಡುವ ಸ್ಥಿತಿ ಎದುರಾಗಿದ್ದು, ಪಾಲಕರಲ್ಲಿ ಆತಂಕ ಮನೆ ಮಾಡಿತ್ತು.
ವಿದ್ಯುತ್ ಕಂಬ ಹಾಗೂ ಓವರ್ ಹೆಡ್ ಟ್ಯಾಂಕ್ ತೆರವುಗೊಳಿಸುವಂತೆ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಬಗ್ಗೆ ಗ್ರಾಮಸ್ಥರಿಂದ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆ ಪೊನ್ನಾಚಿಯ ಸಾಮಾಜಿಕ ಕಾರ್ಯಕರ್ತ ರಾಜು ಅವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಜತೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.
ಹಾಗಾಗಿ, ಜೂ.17ರಂದು ಸೆಸ್ಕ್ ಅಧಿಕಾರಿಗಳು ಶಿಥಿಲಗೊಂಡಿದ್ದ ವಿದ್ಯುತ್ ಕಂಬವನ್ನು ತೆರವುಗೊಳಿಸಿದ್ದರು. ಗುರುವಾರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಓವರ್ ಹೆಡ್ ಟ್ಯಾಂಕ್ ಕೆಡವಿ ತೆರವುಗೊಳಿಸಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ.