ಗೋ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆಯಾಗಲಿ

03 HANUR 4
Published on

ಹನೂರು: ಈ ಭಾಗದ ಕಾವೇರಿ ಹಾಗೂ ಮಲೆಮಹದೇಶ್ವರ ವನ್ಯಜೀವಿ ಅರಣ್ಯ ಪ್ರದೇಶವನ್ನು ಗೋ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸುವ ಸಂಬಂಧ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಂತೆ ಬುಧವಾರ ಭಾರತೀಯ ಕಿಸಾನ್ ಸಂಘದ ತಾಲೂಕು ಸಮಿತಿ ಪದಾಧಿಕಾರಿಗಳು ತಾಲೂಕಿನ ಕೌದಳ್ಳಿಯಲ್ಲಿ ರಾಮಚಂದ್ರಪುರ ಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಿನಲ್ಲಿ 2018ರ ಸರ್ವೇ ಪ್ರಕಾರ 1.20 ಲಕ್ಷ ದೇಸಿ ತಳಿ ಹಸುಗಳಿದ್ದವು. ಆದೀಗ 60 ಸಾವಿರಕ್ಕೆ ಇಳಿಕೆಯಾಗಿದೆ. ಈ ಭಾಗದ ಗ್ರಾಮಗಳು ಕಾಡಂಚಿನಲ್ಲಿದ್ದು, ಇಲ್ಲಿನ ರೈತರು ತಲತಲಾಂತರದಿಂದ ಅರಣ್ಯ ಪ್ರದೇಶದಲ್ಲಿ ದನಗಳನ್ನು ಮೇಯಿಸುತ್ತಿದ್ದಾರೆ. 2 ಸಾವಿರ ಚದರ ಕಿಮೀ ವಿಸ್ತೀರ್ಣ ಹೊಂದಿರುವ ಹಾಗೂ 4 ಹುಲಿಗಳಿಗೆ ಸೀಮಿತವಾಗಿರುವ ಮಲೆಮಹದೇಶ್ವರ ಹಾಗೂ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಪ್ರದೇಶದಲ್ಲಿ ಗೋವುಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಹನೂರು ಭಾಗ ಮಳೆಯಾಶ್ರಿತ ಪ್ರದೇಶವಾಗಿದ್ದು, ಹವಾಮಾನ ವೈಪರೀತ್ಯದಿಂದ ಕಾಲಕಾಲಕ್ಕೆ ಮಳೆಯಾಗುತ್ತಿಲ್ಲ. ಇದರಿಂದ ರೈತರು ಕೃಷಿಯಲ್ಲಿ ನಷ್ಟ ಅನುಭವಿಸುವಂತಾಗಿದೆ. ಈ ದಿಸೆಯಲ್ಲಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಒಂದು ಜಲಾಶಯಕ್ಕೆ ಮಾತ್ರ ಪೈಪ್‌ಲೈನ್ ಕಾಮಗಾರಿ ಮಾಡಲಾಗಿದೆ. ಆದರೂ ಈವೆರಗೂ ನೀರು ಹರಿಸಿಲ್ಲ. ಇನ್ನುಳಿದ ರಾಮನಗುಡ್ಡೆ, ಹುಬ್ಬೆಹುಣಸೆ, ಮಣಗಳ್ಳಿ, ಅಲಗಾಪುರ, ಕಿರೇಪಾತಿ, ಉಡುತೊರೆ, ಹೂಗ್ಯಂ ಡ್ಯಾಂ ಹಾಗೂ ಇನ್ನು ಮುಂತಾದ ಕೆರೆಗಳಿಗೆ ನೀರು ತುಂಬಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಗಮನಕ್ಕೆ ತಂದು ರೈತರು ಹಾಗೂ ಗೋ ಸಂರಕ್ಷಣೆಗೆ ಅನುಕೂಲ ಕಲ್ಪಿಸುವಂತೆ ಸಂಘದ ತಾಲೂಕು ಸಮಿತಿ ಅಧ್ಯಕ್ಷ ಹರೀಶ್ ಮನವಿಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net