

ಹನೂರು: ಪ್ರತಿಯೊಬ್ಬರೂ ಮಹಾನ್ ಪುರುಷರ ಆದರ್ಶಗಳನ್ನು ಪಾಲಿಸುವುದರ ಮೂಲಕ ಶಿಕ್ಷಣದಲ್ಲಿ ಸಾಧನೆಗೈದು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಶಿಕ್ಷಕ ಡಿ.ಮಹದೇವಕುಮಾರ್ ತಿಳಿಸಿದರು.
ತಾಲೂಕಿನ ಮಣಗಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಸಮಾಜಮುಖಿ ನೌಕರರ ಒಕ್ಕೂಟದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡಾ.ಬಿ.ಆರ್ ಅಂಬೇಡ್ಕರ್, ಬುದ್ಧ, ಬಸವಣ್ಣ, ಕನಕದಾಸ, ಸಾಹು ಮಹಾರಾಜ್, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಇನ್ನಿತರ ಮಹಾನ್ ನಾಯಕರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ ಪರಿಣಾಮ ಬಹುಜನರಿಗೆ ಶಿಕ್ಷಣ, ಉದ್ಯೋಗ ಹಾಗೂ ಅಧಿಕಾರ ದೊರಕಿದ್ದು, ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಿದೆ. ಆದ್ದರಿಂದ ಮಹಾನ್ ಪುರುಷರ ಧ್ಯೇಯವನ್ನು ಮುನ್ನಡೆಸಬೇಕಾದರೆ ಪ್ರತಿಯೊಬ್ಬರೂ ಶಿಕ್ಷಣದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಸಮಾಜದ ಹಿತದೃಷ್ಟಿಯಿಂದ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 25 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಈ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಶಿವಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಿಕ್ಕಬಸವಯ್ಯ, ಮುಖ್ಯಶಿಕ್ಷಕಿ ಚಿನ್ನಮ್ಮ, ಶಿಕ್ಷಕರು, ಗ್ರಾಮಸ್ಥರು ಹಾಗೂ ಪಾಲಕರು ಇದ್ದರು.