

ಹನೂರು: ಪಾಲಕರು ಮಕ್ಕಳ ಬಾಲ್ಯ ವಿವಾಹದ ಬಗ್ಗೆ ಮನಸ್ಸು ಮಾಡದೆ ಉತ್ತಮ ಶಿಕ್ಷಣ ಕೊಡಿಸುವುದರ ಮೂಲಕ ಉತ್ತಮ ಪ್ರಜೆಗಳಾಗಿ ರೂಪಿಸಬೇಕು ಎಂದು ಕೊಳ್ಳೇಗಾಲದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಎಂ.ಎನ್ ನಂದಿನಿ ತಿಳಿಸಿದರು.
ತಾಲೂಕಿನ ಪುದು ರಾಮಾಪುರ ಗ್ರಾಮದಲ್ಲಿ ಬುಧವಾರ ರೈತ ಸಂಘ ಗ್ರಾಮ ಘಟಕದ ಎರಡನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿದ್ದ ಬಾಲ್ಯ ವಿವಾಹ ತಡೆ ಜನ ಜಾಗೃತಿ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಾಲ್ಯ ವಿವಾಹ ಕಾನೂನು ಬಾಹಿರ. ಹೀಗಿದ್ದರೂ ಕೆಲ ಪಾಲಕರು ತಮ್ಮ ಜವಾಬ್ದಾರಿಯನ್ನು ಬೇಗ ಮುಗಿಸಿಕೊಳ್ಳುವ ಸಲುವಾಗಿ 18 ವರ್ಷದೊಳಗಿನ ಮಕ್ಕಳನ್ನು ಅದರಲ್ಲೂ ಹೆಣ್ಣು ಮಕ್ಕಳನ್ನು ಮದುವೆಗೆ ದೂಡುತ್ತಿದ್ದಾರೆ. ಇದರಿಂದ ಮಕ್ಕಳ ಆರೋಗ್ಯ, ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ಪಾಲಕರು ಈ ಬಗ್ಗೆ ಮನದಟ್ಟು ಮಾಡಿಕೊಂಡು ಬಾಲ್ಯ ವಿವಾಹಕ್ಕೆ ಮುಂದಾಬಾರದು. ಬದಲಾಗಿ ಉತ್ತಮ ಶಿಕ್ಷಣ ಕೊಡಿಸಿ. ಇದರಿಂದ ಮಕ್ಕಳು ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಮುಖ್ಯ ನ್ಯಾಯಾಧೀಶರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಮಹಿಳೆಯರೇ ಆಗಿದ್ದಾರೆ. ಇದು ಉತ್ತಮ ಶಿಕ್ಷಣದಿಂದ ಸಾಧ್ಯವಾಯಿತು. ಈ ಬಗ್ಗೆ ಪ್ರತಿಯೊಬ್ಬರೂ ಆಲೋಚಿಸಬೇಕು. ಬಾಲ್ಯವಿವಾಹ ತಡೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಹಳ್ಳಿಗಳಲ್ಲಿ ಬಾಲ್ಯ ವಿವಾಹ ಕಂಡು ಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಬೇಕು. ಇಲ್ಲವೇ ನ್ಯಾಯಾಲಯಕ್ಕೆ ಆಗಮಿಸಿ ತಡೆ ಅರ್ಜಿ ಸಲ್ಲಿಸಿದರೆ ತಡೆಗಟ್ಟಬಹುದು. ಕಾನೂನು ಸೇವೆಗಳ ಪ್ರಾಧಿಕಾರದಿಂದ ಶಾಲಾ, ಕಾಲೇಜುಗಳಲ್ಲಿ ಕಾನೂನು ಅರಿವು ಮೂಡಿಸಲಾಗುತ್ತಿದೆ. ರೈತ ಸಂಘ ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಬಳಕೆಯಿಂದ ಆಹಾರ ಗುಣಮಟ್ಟದಲ್ಲಿ ವ್ಯತ್ಯಾಸವಾಗುತ್ತಿದೆ. ಇದು ಹೆಣ್ಣು ಮಕ್ಕಳು ಬೇಗ ಋತುಮತಿಯರಾಗಲು ಕಾರಣವಾಗಿದೆ. ಇದರಿಂದ ಧೃತಿಗೆಡದೆ ಶಿಕ್ಷಣದತ್ತ ಗಮನಹರಿಸಬೇಕು. ಈ ಬಗ್ಗೆ ಪಾಲಕರು ಹೆಚ್ಚಿನ ಗಮನ ನೀಡಬೇಕು ಎಂದರು.
ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ಬಿಇಒ ಗುರುಲಿಂಗಯ್ಯ, ಸಿಡಿಪಿಒ ನಂಜಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್, ವಕೀಲರ ಸಂಘದ ಅಧ್ಯಕ್ಷ ರವಿ, ಕಾರ್ಯದರ್ಶಿ ಮಹೇಶ್‌ಕುಮಾರ್, ವಕೀಲ ಚಿನ್ನರಾಜು, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಉಪಾಧ್ಯಕ್ಷ ಮಹೇಶ್ ಪ್ರಭು, ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಂದ್ರ, ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ, ಉಪಾಧ್ಯಕ್ಷ ಗೌಡೇಗೌಡ, ಮಹಿಳಾ ಘಟಕದ ಕಾರ್ಯದರ್ಶಿ ಪೂಂಗುಡಿ, ಹನೂರು ತಾಲೂಕು ಅಧ್ಯಕ್ಷ ಅಮ್ಜಾದ್ ಖಾನ್, ಮಹಿಳಾ ಘಟಕದ ಅಧ್ಯಕ್ಷೆ ರಾಜಮಣಿ, ಗ್ರಾಮ ಘಟಕದ ಅಧ್ಯಕ್ಷ ವೇಲುಸ್ವಾಮಿ, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.