ಹನೂರು : ಮೂಲ ಸೌಕರ್ಯ ಕೊರತೆಯ ನಡುವೆಯೂ ಹನೂರು ಭಾಗದ ಗುಡ್ಡಗಾಡು ಪ್ರದೇಶದ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸೇವೆ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಎಂ.ಆರ್ ಮಂಜುನಾಥ್ ಮೆಚ್ಚುಗೆ ವ್ಯಕ್ತಪಡಿಸಿದರು.
ಪಟ್ಟಣದ ಆರ್.ಎಸ್ ದೊಡ್ಡಿಯ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಶೈಕ್ಷಣಿಕ ಬಲವರ್ಧನೆ ಕಾರ್ಯಾಗಾರ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ಇತರ ತಾಲೂಕುಗಳಿಗೆ ಹೋಲಿಸಿದರೆ ಹನೂರು ತಾಲೂಕು ಹೆಚ್ಚು ಗುಡ್ಡಗಾಡು ಪ್ರದೇಶದಿಂದ ಕೂಡಿದೆ. ಇಲ್ಲಿನ ಕೆಲವು ಶಾಲೆಗಳಲ್ಲಿ ಮೂಲ ಸೌಕರ್ಯ ಇರುವುದು ಗಮನಕ್ಕೆ ಬಂದಿದೆ. ಏತನ್ಮಧ್ಯೆ ಶಿಕ್ಷಕರು ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಸಮಸ್ಯೆಯ ನಡುವೆಯೂ ಶ್ರಮವಹಿಸಿ ಉತ್ತಮ ಸೇವೆ ಸಲ್ಲಿಸುತ್ತಿರುವುದು ಮೆಚ್ಚುಗೆ ಸಂಗತಿ. ಈ ದೆಸೆಯಲ್ಲಿ ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವುದು ನನ್ನ ಆದ್ಯ ಕರ್ತವ್ಯ. ಹಾಗಾಗಿ ನನ್ನ ಅನುದಾನದಲ್ಲಿ ಶೇಕಡ 80ರಷ್ಟನ್ನು ಶಿಕ್ಷಣಕ್ಕೆ ಮೀಸಲಿಡಲು ನಿರ್ಧರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಖುದ್ಧಾಗಿ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಮೂಲ ಸೌಕರ್ಯವನ್ನು ಒದಗಿಸಲು ಪ್ರಮಾಣಿಕವಾಗಿ ಶ್ರಮಿಸಲಾಗುವುದು. ಜತೆಗೆ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿಯೂ ನನ್ನ ಜವಾಬ್ದಾರಿಯೂ ಹೆಚ್ಚಿದೆ. ಈ ಸಂಬಂಧ ಯೋಜನೆ ರೂಪಿಸಿ ಕಾರ್ಯಗತಗೊಳಿಸುವುದರ ಮೂಲಕ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗುವುದು. ಇನ್ನು ಶಿಕ್ಷಕರು ಸಭೆ, ಸಮಾರಂಭ ಹಾಗೂ ಕಾರ್ಯಕ್ರಮವನ್ನು ಆಯೋಜಿಸಲು ತಾಲೂಕು ಕೇಂದ್ರದಲ್ಲಿ ಗುರುಭವನ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಲಾಗುವುದು. ಈ ಸಂಬಂಧ ತಹಸೀಲ್ದಾರ್ ಅವರಿಗೆ ಜಾಗ ನೀಡುವಂತೆ ಸೂಚಿಸಲಾಗಿದ್ದು, ಮುಂದಿನ ವರ್ಷದೊಳಗೆ ಜಾಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಹಾಗಾಗಿ, ಮುಂದಿನ ದಿನಗಳಲ್ಲಿ ಹಂತಹಂತವಾಗಿ ಶೈಕ್ಷಣಿಕ ಸಮಸ್ಯೆಗಳು ಬಗೆಹರಿಯಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಗಳಿಸಬೇಕು: ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಬಹುತೇಕರು ಉದ್ಯೋಗ ಪಡೆಯುವಲ್ಲಿ ಕಷ್ಟಪಡುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯವನ್ನು ಬೆಳೆಸುವುದರ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳುವ ಬಗ್ಗೆ ಅಗತ್ಯ ಮಾರ್ಗದರ್ಶನ ನೀಡಬೇಕು. ಇನ್ನು ಕಳೆದ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಉತ್ತಮ ಪಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಭರವಸೆ ತುಂಬುವ ವಿಶೇಷ ಕಾರ್ಯಕ್ರಮವನ್ನು ರೂಪುಗೊಳಿಸಲಾಗಿತ್ತು. ಆದರೆ ವಿಫಲವಾಯಿತು. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಆತ್ಮಲೋಕನ ಮಾಡಿಕೊಳ್ಳುವುದರ ಮೂಲಕ ಈ ಬಾರಿಯ ಫಲಿತಾಂಶದಲ್ಲಿ ಹನೂರು ವಲಯ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಗಳಿಸಬೇಕು. ಈ ಬಗ್ಗೆ ಪ್ರತಿಯೊಬ್ಬರೂ ಹೆಚ್ಚಿನ ಒತ್ತು ನೀಡಿ ಕಾರ್ಯತಂತ್ರ ರೂಪಿಸಬೇಕು ಎಂದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು: ರಾಜ್ಯದಲ್ಲಿ ಹುಲಿಯಾಳ, ವಿರಾಜಪೇಟೆಯನ್ನು ಹೊರತು ಪಡಿಸಿದರೆ ಹನೂರು ವಿಧಾನಸಭಾ ಕ್ಷೇತ್ರ ಹೆಚ್ಚು ವಿಸ್ತೀರ್ಣ ಹೊಂದಿದೆ. ಬಹುತೇಕ ಗ್ರಾಮಗಳಲ್ಲಿ ಅಗತ್ಯ ಮೂಲ ಸೌಕರ್ಯಗಳಿಲ್ಲ. ಜತೆಗೆ ಮುಖ್ಯವಾಗಿ ಹನೂರಿನಿಂದ ಮ.ಬೆಟ್ಟದ ರಸ್ತೆ, ಬಂಡಳ್ಳಿ, ನಾಲ್‌ರೋಡ್ ಹಾಗೂ ಲೊಕ್ಕನಹಳ್ಳಿ ರಸ್ತೆ ಅಭಿವೃದ್ಧಿಯಾಗಬೇಕಿದೆ. ಹನೂರು ನಂಜುಂಡಪ್ಪ ವರದಿಯ ಪ್ರಕಾರ ಹಿಂದುಳಿದ ತಾಲೂಕಾಗಿದೆ. ಇದರನ್ವಯ ಸರ್ಕಾರ ತಾಲೂಕು ಅಭಿವೃದ್ಧಿಗೆ ವಿಶೇಷ ಅನುದಾನವನ್ನು ನೀಡಬೇಕು. ಈ ಬಗ್ಗೆ ಹೋರಾಟ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ. ಆದ್ದರಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಹಂತಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು. ಜತೆಗೆ ಹನೂರಿಗೆ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಸಮಾಜ ತಿದ್ದುವ ನಾಯಕರು: ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಜಿಲ್ಲಾಧ್ಯಕ್ಷ ವಿನಯ್ ಮಾತನಾಡಿ, ಹನೂರು ಹಿಂದುಳಿದ ತಾಲೂಕಾಗಿರಬಹುದು. ಆದರೆ ಸ್ವಾತಂತ್ರ್ಯ ಪೂರ್ವದಲ್ಲಿ ಶಾಲೆ ಹಾಗೂ ಶಿಕ್ಷಣ ಕೊರತೆಯಿದ್ದರೂ ಈ ಭಾಗದಲ್ಲಿ ಶಿಕ್ಷಿತರು ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂಬುದಕ್ಕೆ ಇಲ್ಲಿ ದೊರೆತಿರುವ 48 ಕುಮಾರವ್ಯಾಸರ ಪ್ರತಿಗಳು ಸಾಕ್ಷಿ. ಜತೆಗೆ ಈ ಭಾಗದಲ್ಲಿ ನೆಲೆಸಿರುವ ಶ್ರೀ ಮಹದೇಶ್ವರರು ಸಾಮಾಜಿಕ ಪರಿವರ್ತನೆಯ ಶಿಕ್ಷಣವನ್ನು ನೀಡಿದ್ದಾರೆ. ಹಾಗಾಗಿ ಹನೂರು ಭಾಗದಲ್ಲಿ ಶಿಕ್ಷಿತರ ಸಂಖ್ಯೆ ಹೆಚ್ಚಿದೆ. ಶಿಕ್ಷಕರು ವಿದ್ಯೆಯಲ್ಲಿ ಸಮಾಜವನ್ನು ತಿದ್ದುವ ನಾಯಕರು. ಹಾಗಾಗಿ ಇಂದಿನ ಆಧುನಿಕ ಯುಗದಲ್ಲಿ ಶಿಕ್ಷಕರ ಹೊಣೆಗಾರಿಕೆ ಹೆಚ್ಚಿದೆ ಎಂದು ತಿಳಿಸಿದರು.
ಸರ್ವೇಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷೆ ಮಮ್ತಾಜ್‌ಬಾನು, ಸದಸ್ಯರಾದ ಪವಿತ್ರಾ, ಮಹೇಶ್, ಸಂಪತ್‌ಕುಮಾರ್, ಹರೀಶ್, ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ಬಿಇಒ ಗುರುಲಿಂಗಯ್ಯ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹಾದೇವ, ಬಿಆರ್‌ಪಿ ವೆಂಕಟೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರಯ್ಯ, ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಬಸವರಾಜು ಹಾಗೂ ಇನ್ನಿತರರು ಇದ್ದರು.