

ಹನೂರು: ಚಾಲನಾ ಪರವಾನಿಗೆಯನ್ನು ಕಡ್ಡಾಯವಾಗಿ ಹೊಂದಿರುವುದರ ಜತೆಗೆ ಬೈಕ್ ಚಾಲನೆ ವೇಳೆ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಬೇಕು. ರಸ್ತೆ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಇನ್‌ಸ್ಪೆಕ್ಟರ್ ಶಶಿಕುಮಾರ್ ತಿಳಿಸಿದರು.
ಪಟ್ಟಣ ಪೊಲೀಸ್ ಠಾಣೆಯಲ್ಲಿ ಗುರುವಾರ ಜಿ.ವಿ.ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಮಾತನಾಡಿದರು. 18 ವರ್ಷ ಮೇಲ್ಪಟ್ಟಿರುವ ಪ್ರತಿಯೊಬ್ಬರೂ ಜವಾಬ್ದಾರಿಯುತ ನಾಗರಿಕರು. ಹಾಗಾಗಿ ಪದವಿ ಶಿಕ್ಷಣ ಪಡೆಯುತ್ತಿರುವ ಎಲ್ಲರಿಗೂ ಹಕ್ಕು ಮತ್ತು ಕರ್ತವ್ಯಗಳ ಜತೆಗೆ ತನ್ನದೇಯಾದ ಜವಾಬ್ದಾರಿ ಇದೆ. ಆದ್ದರಿಂದ ಪ್ರತಿಯೊಬ್ಬರೂ ಓದಿನ ಕಡೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಈ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಬೈಕ್ ಸವಾರರು ಮೃತಪಡುತ್ತಿದ್ದಾರೆ. ಇದಕ್ಕೆ ಹೆಲ್ಮೆಟ್ ಧರಿಸದಿರುವುದೇ ಮುಖ್ಯ ಕಾರಣ. ಆದ್ದರಿಂದ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಪರವಾನಗಿ ಚಾಲನೆ ಹೊಂದಿರಬೇಕು. ವಾಹನಕ್ಕೆ ವಿಮೆ ಇರುವಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ವಿದ್ಯಾರ್ಥಿ ಜೀವನದ ಅವಧಿ ಭವಿಷ್ಯ ರೂಪಿಸಿಕೊಳ್ಳುವ ಉಜ್ವಲದ ಹಂತ. ಕೆಲವರು ಮಾದಕ ವಸ್ತುಗಳ ಚಟಕ್ಕೆ ಒಳಗಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಸಮಾಜದ ಸ್ವಾಸ್ಥೃ ಕೆಡುತ್ತದೆ. ಗ್ರಾಮಗಳಲ್ಲಿ ಬಾಲ್ಯ ವಿವಾಹ ನಡೆಯುವುದು ಕಂಡು ಬಂದರೆ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು. ಸಬ್ ಇನ್‌ಸ್ಪೆಕ್ಟರ್ ಮಂಜುನಾಥ್ ಪ್ರಸಾದ್, ಉಪನ್ಯಾಸಕರಾದ ಯಶವಂತ್, ಸುರೇಂದ್ರ, ಪೊಲೀಸ್ ಸಿಬ್ಬಂದಿ ಇದ್ದರು.