ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಿ

08 HANUR 2
Published on

ಹನೂರು: ನಿರ್ದಿಷ್ಟ ಗುರಿಯನ್ನು ಹೊಂದುವುದರ ಮೂಲಕ ಶ್ರದ್ಧೆಯಿಂದ ಓದಿನ ಕಡೆ ಹೆಚ್ಚಿನ ಒತ್ತು ನೀಡಿದರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಬಹುದು ಎಂದು ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಸಲಹೆ ನೀಡಿದರು.

ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠ ಹಾಗೂ ಶ್ರೀ ಮಲೆಮಹದೇಶ್ವರ ಸ್ವಾಮಿ ಕೃಪಾ ಎಜುಕೇಷನ್ ಸೊಸೈಟಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪುನಶ್ಚೇತನ ಶಿಬಿರದಲ್ಲಿ ಮಾತನಾಡಿದರು. ಇತ್ತೀಚಿನ ವರ್ಷಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಉದ್ಯೋಗವನ್ನು ಪಡೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹಾಗಾಗಿ, ಪೈಪೋಟಿ ಎದುರಿಸಬೇಕಿದೆ. ಪರೀಕ್ಷೆಗಳು ಅಭ್ಯರ್ಥಿಯ ಜ್ಞಾನ, ಕೌಶಲ ಹಾಗೂ ಯೋಗ್ಯತೆಯನ್ನು ಮೌಲ್ಯ ಮಾಪನಗೊಳಿಸುವುದರ ಮೂಲಕ ಬಹುಮುಖಿ ವಿಧಾನವನ್ನು ಒಳಗೊಂಡಿವೆ. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುವುದಲ್ಲದೆ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಪ್ರದರ್ಶಿಸುವ ವ್ಯಕ್ತಿಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಎಂದರು.

ಆಳವಾದ ವಿಷಯ ಜ್ಞಾನ, ಸಮಸ್ಯೆ ಪರಿಹರಿಸುವ ಸಾಮರ್ಥ್ಯಗಳು, ವಿಶ್ಲೇಷಣಾತ್ಮಕ ತಾರ್ಕಿಕತೆ ಹಾಗೂ ಪರಿಣಾಮಕಾರಿ ಸಮಯ ನಿರ್ವಹಣೆಯನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಗಳ ನಡುವೆ ಆರೋಗ್ಯಕರ ಸ್ಪರ್ಧಾ ಮನೋಭಾವನೆ ಬೆಳೆಸುತ್ತದೆ. ಸವಾಲುಗಳನ್ನು ಎದುರಿಸುವಲ್ಲಿ ಸ್ಥಿತಿ ಸ್ಥಾಪಕತ್ವ ಹಾಗೂ ನಿರ್ಣಯವನ್ನು ಬೆಳೆಸುತ್ತದೆ. ಭವಿಷ್ಯದಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ನಿರ್ದಿಷ್ಟ ಗುರಿ ಹೊಂದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಬೇಕು. ಪೂರ್ವ ತಯಾರಿ ಮಾಡಿಕೊಳ್ಳಬೇಕು. ಪರೀಕ್ಷೆಯನ್ನು ಆತ್ಮವಿಶ್ವಾಸ, ಧೈರ್ಯದಿಂದ ಎದುರಿಸಬೇಕು. ಈ ದಿಸೆಯಲ್ಲಿ ಸಾಲೂರು ಬೃಹನ್ಮಠದಿಂದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿರುವುದು ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net