

ರಾಯಚೂರು: ಸಾಮರಸ್ಯ ನಮ್ಮ ನಾಡಿನ ಸಂಸ್ಕೃತಿಯ ಜೀವಾಳವಾಗಿದ್ದು, ನಮ್ಮ ಭವ್ಯ ಸಾಂಸ್ಕೃತಿಕ ಪರಂಪರೆ ಹಾಗೂ ನಾಡು, ನುಡಿಯ ಸಂರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಸ್ಥಳೀಯ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ನಿಮಿತ್ತ ಬುಧವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿಶ್ವಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಸರ್ಕಾರ ಕನ್ನಡ ನಾಡು, ನುಡಿ, ನೆಲಜಲ ಸಂರಕ್ಷಣೆ ವಿಷಯಕ್ಕೆ ಬದ್ಧವಾಗಿದೆ ಎಂದರು.
ರಾಯಚೂರು ಜಿಲ್ಲೆಗೆ ಐತಿಹಾಸಿಕ ವಿಶೇಷತೆಯಿದ್ದು, ಏಕೀಕರಣ ಹೋರಾಟಕ್ಕೆ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಶಿಲಾಶಾಸನ, ಕೋಟೆ ಕೊತ್ತಲಗಳು ಇದಕ್ಕೆ ಸಾಕ್ಷಿಯಾಗಿವೆ. ಕರ್ನಾಟಕ ಕೇವಲ ಒಂದು ಭೂ ಪ್ರದೇಶಕ್ಕೆ ಮಾತ್ರ ಸಿಮೀತವಾಗಿಲ್ಲ. ಸಂಸ್ಕೃತಿ, ಜನ ಸಮುದಾಯ, ಜೀವನ ಪದ್ಧತಿ ಕನ್ನಡದಲ್ಲಿದೆ.
ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ವರ್ಷವಿಡಿ ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಡು ನುಡಿಗೆ ಸಂಬಂಸಿದಂತೆ ಯುವಜನರಲ್ಲಿ ಅರಿವು ಮೂಡಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಈ ಸಂದರ್ಭದಲ್ಲಿ ಪೊಲೀಸ್, ಗೃಹ ರಕ್ಷಕ ದಳ, ಸೇವಾದಳಗಳಿಂದ ಪಥ ಸಂಚಲನ ನಡೆಯಿತು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಹೆಸರಾಂತ ಕವಿಗಳ ಐದು ಕನ್ನಡ ಗೀತೆಗಳ ಗಾಯನ ನಡೆಯಿತು. ಇದಕ್ಕೂ ಮುಂಚೆ ಕರ್ನಾಟಕ ಸಂಘದಿಂದ ಕ್ರೀಡಾಂಗಣದವರೆಗೆ ಭುವನೇಶ್ವರಿ ಮೂರ್ತಿಯ ಮೆರವಣಿಗೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷ ಬಷೀರ್ ಅಹ್ಮದ್, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಸಹಾಯಕ ಆಯುಕ್ತೆ ಮಹೆಬೂಬಿ, ಕಸಾಪ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಉಪಸ್ಥಿತರಿದ್ದರು.