ಖಾಸಗೀಕರಣ, ದರ ಏರಿಕೆ ಖಂಡಿಸಿ ಪ್ರತಿಭಟನೆ

20HSN1
Published on

ಹಾಸನ: ಕಾರ್ಮಿಕ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಖಾಸಗೀಕರಣ ಹಾಗೂ ದರ ಏರಿಕೆ ಖಂಡಿಸಿ ಸಿಪಿಐ(ಎಂ) ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರೊನಾ ಕಾರ್ಮೋಡದಿಂದ ಕಂಗೆಟ್ಟಿರುವ ಸಾಮಾನ್ಯ ಜನರ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬರೆ ಎಳೆದಿದೆ. ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿ ಮರುಳು ಮಾಡುತ್ತಿದ್ದಾರೆ. ಬಂಡವಾಳಶಾಹಿ ಪರ ಕಾನೂನುಗಳ ಮೂಲಕ ದುಡಿಯುವ ವರ್ಗವನ್ನು ಅವನತಿಯತ್ತ ದೂಡುತ್ತಿದ್ದಾರೆ ಎಂದು ಆರೋಪಿಸಿದರು.

ಎರಡು ತಿಂಗಳ ಲಾಕ್ ಡೌನ್‌ನಿಂದ ಮನೆಯಿಂದ ಹೊರಗೆ ಬರಲಾಗದೆ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಕಾರ್ಮಿಕ ಕಾನೂನಿಗೆ ತಿದ್ದುಪಡಿ ತರಲಾಗಿದೆ. 8 ಗಂಟೆಗೆ ಸೀಮಿತವಾಗಿದ್ದ ಕೆಲಸದ ಅವಧಿಯನ್ನು 12 ಗಂಟೆಗೆ ವಿಸ್ತರಿಸಲಾಗಿದೆ. ಖಾಸಗಿಯವರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ಆ ಹೊರೆಯನ್ನು ಸಾಮಾನ್ಯ ಜನರ ಮೇಲೆ ವಿಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಧರ್ಮೇಶ್, ಸ್ಥಳೀಯ ಸಮಿತಿ ಕಾರ್ಯದರ್ಶಿ ಎಚ್.ಆರ್. ನವೀನ್ ಕುಮಾರ್, ಜಿಲ್ಲಾ ಸಂಘಟನಾ ಸಮಿತಿ ಸದಸ್ಯರಾದ ಜಿ.ಪಿ. ಸತ್ಯನಾರಾಯಣ್, ಎಂ.ಜಿ. ಪೃಥ್ವಿ, ವಸಂತಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net