

ಹಾಸನ: ಶಾಸಕ ಪ್ರೀತಂ ಜೆ. ಗೌಡ ಅಧಿಕಾರಿಗಳಿಂದ ದುಡ್ಡು ಪಡೆದು ಗ್ರಾಮ ಪಂಚಾಯಿತಿ ಚುನಾವಣೆ ನಡೆಸುತ್ತಿದ್ದು ಪ್ರಜಾಪ್ರಭುತ್ವವನ್ನು ಗಾಳಿಗೆ ತೂರಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ. ಮಹೇಶ್ ಆರೋಪಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲ್ಲಿಸುವುದು ನಮ್ಮೆಲ್ಲರ ಹೊಣೆಗಾರಿಕೆ. ಪ್ರಜಾಪ್ರಭುತ್ವದಲ್ಲಿ ಈ ರೀತಿಯ ವ್ಯವಸ್ಥೆ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ ಎಂಬುದನ್ನು ಕಾರ್ಯಕರ್ತರು ಅರಿಯಬೇಕು. ಪ್ರಾಮಾಣಿಕತೆ, ಪರಿಶ್ರಮಕ್ಕೆ ಪ್ರತಿಫಲ ಇದ್ದೇ ಇರುತ್ತದೆ. ಆದ್ದರಿಂದ ಕಾರ್ಯಕರ್ತರು ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಚುನಾವಣೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಾನು ಎರಡು ಬಾರಿ ಪರಾಭವಗೊಂಡಿದ್ದೇನೆ. ಸೋಲನ್ನು ಸವಾಲಾಗಿ ಸ್ವೀಕರಿಸಿದ್ದೇನೆ ಎಂದರು.