

ಹಾಸನ: ದೆಹಲಿಯ ಜೆಎನ್‌ಯುವಿನಲ್ಲಿ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ವಿದ್ಯಾರ್ಥಿ ಸಂಘಟನೆಯಿಂದ ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜು ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ವಿಶ್ವವಿದ್ಯಾಲಯ ಕ್ಯಾಂಪಸ್‌ನೊಳಗೆ ನುಗ್ಗಿದ ದುಷ್ಕರ್ಮಿಗಳು ಆಯುಧಗಳಿಂದ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆ. ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಆಯಿಶಿ ಘೋಷ್ ಅವರ ಮುಖ ಹಾಗೂ ತಲೆಗೆ ಬಲವಾಗಿ ಹೊಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರ್‌ಎಸ್‌ಎಸ್ ಪ್ರೇರಿತ ಸಂಘಟನೆಗಳಿಂದಲೇ ಕೃತ್ಯ ನಡೆದಿದೆ ಎಂದು ಆರೋಪಿಸಿದರು.
ಕಾಲೇಜು ಅಭಿವೃದ್ಧಿಗಾಗಿ ಹಾಗೂ ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳೆಲ್ಲರೂ ಪ್ರತಿಭಟನೆ ನಡೆಸುತ್ತಿದ್ದರು. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗೆ ಕೆಲ ಪ್ರಾಧ್ಯಾಪಕರೂ ಬೆಂಬಲ ನೀಡಿದ್ದರು. ಆದರೆ ಕೇಸರಿ ಪಡೆಗಳು ವಿದ್ಯಾರ್ಥಿಗಳ ಹೋರಾಟ ಹತ್ತಿಕ್ಕಲು ಹಿಂಸಾತ್ಮಕ ದಾರಿ ಹಿಡಿದಿವೆ ಎಂದು ಆರೋಪಿಸಿದ ಪ್ರತಿಭಟನಾನಿರತರು, ಜೆಎನ್‌ಯು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಸುಭಾಷ್ ಇತರರಿದ್ದರು.