

ಹಾಸನ: ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ರೈತ ಸಂಘದಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಬಂದು ಜಿಲ್ಲಾಧಿಕಾರಿ ಕಚೇರಿ ಸ್ಥಾನಿಕ ಅಧಿಕಾರಿ ತಿಮ್ಮಪ್ಪ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಹಾಗೂ ಕೆಎಸ್‌ಆರ್‌ಟಿಸಿ ನೌಕರರ ಹೋರಾಟದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಪಾಲ್ಗೊಂಡರು ಎಂಬ ಮಾತ್ರಕ್ಕೆ ಶಾಸಕ ರೇಣುಕಾಚಾರ್ಯ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಸಮಾಜದಲ್ಲಿ ತಮ್ಮದೇಯಾದ ಸ್ಥಾನಮಾನ ಗಳಿಸಿರುವ ರೈತ ನಾಯಕನ ಕುರಿತು ಮಾತನಾಡುವಾಗ ಎಚ್ಚರ ವಹಿಸಬೇಕು. ರಾಜ್ಯ ರಸ್ತೆ ಸಾರಿಗೆ ನಿಗಮದ 25 ನೌಕರರನ್ನು ಅಮಾನತು ಮಾಡಿರುವ ಸರ್ಕಾರ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯ ರೈತ ಸಂಘದ ಉಪಾಧ್ಯಕ್ಷ ಆನೆಕೆರೆ ರವಿ, ಜಿಲ್ಲಾಧ್ಯಕ್ಷ ಬಾಬು, ಕಾರ್ಯದರ್ಶಿ ಜಯರಾಂ, ಮಹಮದ್ ಸಾದೀಕ್, ಮೀಸೆ ಮಂಜಣ್ಣ, ಶಿವರಾಮೇಗೌಡ, ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ ಸಿ.ಜೆ. ರವಿ, ಗೀತಾ, ಹೇಮಾ ಹಾಗೂ ಇತರರಿದ್ದರು.