

ಹಾಸನ: ಬೆಳೆ ವಿಮೆಯನ್ನು ಸಕಾಲದಲ್ಲಿ ರೈತರಿಗೆ ತಲುಪಿಸಬೇಕು ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕರೊನಾ ಹಿನ್ನೆಲೆಯಲ್ಲಿ ಜನರು ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಜಿಲ್ಲೆಯಲ್ಲಿ ಹೆಚ್ಚು ಬಿತ್ತನೆಯಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಪೂರೈಕೆಯಲ್ಲಿ ಕೊರತೆಯಾಗದಂತೆ ನಿಗಾವಹಿಸಿ ಎಂದು ಹೇಳಿದರು.
ಆರೋಗ್ಯ ಇಲಾಖೆ ನೀಡಿರುವ ಆಯುಷ್ಮಾನ್ ಕಾರ್ಡ್ ಬಿಪಿಎಲ್ ಕುಟುಂಬದವರಿಗೆ 5 ಲಕ್ಷ ರೂ. ವರೆಗೆ ಸೌಲಭ್ಯ ಒದಗಿಸಲಿದ್ದು, ಅರ್ಹರಿಗೆ ಅದು ತಲುಪಬೇಕು. ತಾಲೂಕು ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿಯ ವೈದ್ಯರು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, ಇದೇ ಪರಿಸ್ಥಿತಿ ಕಾಯ್ದುಕೊಳ್ಳಬೇಕು ಎಂದರು.
ಬೆಳಕು ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ಪೂರ್ಣಗೊಳಿಸಲಾಗಿರುವ ಕಾಮಗಾರಿಗಳ ವರದಿ ಪಡೆದ ಶ್ವೇತಾ ದೇವರಾಜ್, ನಿರಂತರ ಜ್ಯೋತಿ ಯೊಜನೆಯಡಿ ಬಾಕಿ ಇರುವ ಎಲ್ಲ ಮನೆಗಳಿಗೆ ಶೀಘ್ರವಾಗಿ ವಿದ್ಯುತ್ ಸಂಪರ್ಕ ಒದಗಿಸಬೇಕು. ಗಂಗಾ ಕಲ್ಯಾಣ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ಒದಗಿಸಬೇಕೆಂದು ಸೂಚಿಸಿದರು.