ಗುಣಮಟ್ಟದ ಶಿಕ್ಷಣದಿಂದ ಉತ್ತಮ ಭವಿಷ್ಯ ಸಾಧ್ಯ

ಮೊಸಳೆ ಹೊಸಹಳ್ಳಿಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯರಿಗೆ ನೂತನವಾಗಿ ನಿರ್ಮಿಸಿರುವ ಹಾಸ್ಟೆಲ್ ಕಟ್ಟಡವನ್ನು ಶಾಸಕ ಎಚ್.ಡಿ.ರೇವಣ್ಣ ಉದ್ಘಾಟಿಸಿದರು. ಪ್ರಾಂಶುಪಾಲ ರಂಗಸ್ವಾಮಿ, ಉಷಾರಾಣಿ ಇತರರಿದ್ದರು.
ಮೊಸಳೆ ಹೊಸಹಳ್ಳಿಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯರಿಗೆ ನೂತನವಾಗಿ ನಿರ್ಮಿಸಿರುವ ಹಾಸ್ಟೆಲ್ ಕಟ್ಟಡವನ್ನು ಶಾಸಕ ಎಚ್.ಡಿ.ರೇವಣ್ಣ ಉದ್ಘಾಟಿಸಿದರು. ಪ್ರಾಂಶುಪಾಲ ರಂಗಸ್ವಾಮಿ, ಉಷಾರಾಣಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗುಣಮಟ್ಟದ ಶಿಕ್ಷಣದಿಂದ ಉತ್ತಮ ಭವಿಷ್ಯ ಸಾಧ್ಯ
  • ಶಾಸಕ ಎಚ್.ಡಿ.ರೇವಣ್ಣ ಅಭಿಪ್ರಾಯ
  • ಮೊಸಳೆ ಹೊಸಹಳ್ಳಿಯಲ್ಲಿ ಹಾಸ್ಟೆಲ್ ಕಟ್ಟಡ ಉದ್ಘಾಟನೆ
ಹಾಸನ: ಗ್ರಾಮೀಣ ಪ್ರದೇಶದ ಬಡಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವುದರಿಂದ ಅವರಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿ ಆಗುತ್ತದೆ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.
ಮೊಸಳೆ ಹೊಸಹಳ್ಳಿಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯರಿಗೆ ನೂತನವಾಗಿ ನಿರ್ಮಿಸಿರುವ ಹಾಸ್ಟೆಲ್ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಿ ಕಾಲೇಜುಗಳಲ್ಲಿ ಖಾಸಗಿ ಕಾಲೇಜುಗಳಿಗಿಂತ ಉತ್ತಮ ಶಿಕ್ಷಣ ಒದಗಿಸಲು ಮುತುವರ್ಜಿವಹಿಸಬೇಕು ಎಂದರು.
ಮೊಸಳೆ ಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 1,445 ಮಕ್ಕಳು ಮತ್ತು ಪಾಲಿಟೆಕ್ನಿಕ್ ಕಾಲೇಜಿನಲ್ಲಿ 450 ಮಕ್ಕಳು ಓದುತ್ತಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲವಾಗುತ್ತಿದೆ. ಮುಖ್ಯ ರಸ್ತೆಯಿಂದ ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗುವಂತೆ 15 ರಿಂದ 20 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ರಂಗಸ್ವಾಮಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮೊಸಳೆ ಹೊಸಹಳ್ಳಿಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು 2019 ರಲ್ಲಿ ಐದು ಕೋರ್ಸ್‌ಗಳೊಂದಿಗೆ ಪ್ರಾರಂಭವಾಗಿದ್ದು, ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಬಾರಿ ಹೊಸದಾಗಿ ಎ.ಐ ಮತ್ತು ಡೇಟಾಬೇಸ್ ಕೋರ್ಸ್‌ಗಳು ಹಾಗೂ ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಎಂ.ಟೆಕ್ ಕೋರ್ಸ್‌ಗಳು ಪ್ರಾರಂಭವಾಗಿವೆ ಎಂದು ತಿಳಿಸಿದರು.
ಭಾರತ್ ಎಲೆಕ್ಟ್ರಾನಿಕ್ಸ್ ಕಂಪನಿಯವರು ನಡೆಸಿದ ಕ್ಯಾಂಪಸ್ ಸೆಲೆಕ್ಷನ್‌ನಲ್ಲಿ ಸದರಿ ಕಾಲೇಜಿನ 8 ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಈ ಕಾಲೇಜಿಗೆ ಮತ್ತೊಂದು ಹೆಮ್ಮೆ ವಿಷಯ ಎಂದು ಸಂತಸ ವ್ಯಕ್ತಪಡಿಸಿದರು.
ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅತ್ಯಂತ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆದಿರುವ ಕಾಲೇಜು ಎಂಬ ಹೆಗ್ಗಳಿಕೆಗೆ ಕಾಲೇಜು ಪಾತ್ರವಾಗಿದೆ. ಮುಂದೊಂದು ದಿನ ರಾಜ್ಯದ ಮೊದಲ 10 ಕಾಲೇಜುಗಳಲ್ಲಿ ಮೊಸಳೆ ಹೊಸಹಳ್ಳಿ ಕಾಲೇಜು ಸ್ಥಾನ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.
ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಉಷಾರಾಣಿ ಅವರು ಮಾತನಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net