ಕರ್ತವ್ಯ ಆ್ಯಪ್‌ನಲ್ಲಿ ಹಾಜರಾತಿ ಕಡ್ಡಾಯ

 ಹಾಸನದಲ್ಲಿ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಸಿಇಒ ಶುಭಂ ಶುಕ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶ್ರೀನಿಧಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಹಾಸನದಲ್ಲಿ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಸಿಇಒ ಶುಭಂ ಶುಕ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶ್ರೀನಿಧಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕರ್ತವ್ಯ ಆ್ಯಪ್‌ನಲ್ಲಿ ಹಾಜರಾತಿ ಕಡ್ಡಾಯ
  • ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ
  • ಡಿಸಿಕಚೇರಿ ಸಭಾಂಗಣದಲ್ಲಿ ಸಭೆ
ಹಾಸನ: ಸರ್ಕಾರಿ ಕಚೇರಿಗಳ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿದಿನ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹಾಜರಾಗಿ ಕರ್ತವ್ಯ ಆ್ಯಪ್ ಮೂಲಕ ಹಾಜರಾತಿಯನ್ನು ಕಡ್ಡಾಯವಾಗಿ ಹಾಕುವುದರ ಜತೆಗೆ ಕೇಂದ್ರ ಸ್ಥಾನದಲ್ಲಿ ವಾಸವಿರಬೇಕು ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಸೂಚಿಸಿದರು.
ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಇತ್ತೀಚೆಗೆ ಮುಖ್ಯಮಂತ್ರಿ ಡಿಕೆಶಿ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಪ್ರತಿ ಸರ್ಕಾರಿ ಕಚೇರಿಯಲ್ಲಿ ಲಂಚ ಮುಕ್ತ ಕಚೇರಿ ಎಂದು ಫಲಕ ಅಳವಡಿಸುವುದರ ಜತೆಗೆ ನೋಡಲ್ ಅಧಿಕಾರಿ ನೇಮಕ ಮಾಡಬೇಕು. ಜತೆಗೆ ಮೊಬೈಲ್ ನಂಬರ್ ಹಾಕಬೇಕು ಎಂದರಲ್ಲದೆ, ಯಾವುದೇ ದೂರು ಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಮಾಹೆಯ ಮೊದಲ ಶನಿವಾರ ತಾಲೂಕು ಮಟ್ಟದಲ್ಲಿ, ಮೂರನೇ ಶನಿವಾರ ಜಿಲ್ಲಾ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದೆ. ಇನ್ನು ಮುಂದೆ ಪ್ರತಿ ಮಾಹೆಯಲ್ಲಿ ಒಂದು ದಿನ ಗ್ರಾಮ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುವ ಮೂಲಕ ಸಮಸ್ಯೆಗಳನ್ನು ಅವಲೋಕಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಗುಟ್ಕಾ, ಮದ್ಯಪಾನ, ಉಗುಳುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದ್ದು, ಧೂಮಪಾನ ಮಾಡುವುದು ಕಂಡುಬಂದಲ್ಲಿ ದಂಡ ವಿಧಿಸಬೇಕು. ಜತೆಗೆ ಸರ್ಕಾರಿ ಕಚೇರಿಗಳಲ್ಲಿ ಧೂಮಪಾನ ಮುಕ್ತ ಕಚೇರಿ ಎಂದು ಫಲಕ ಅಳವಡಿಸಬೇಕು ಎಂದರು.
ಜೂ.28 ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಇನ್ನು ವಲಸೆ ಕಾರ್ಮಿಕರನ್ನು ಪತ್ತೆ ಹಚ್ಚಿ ಯಾವುದೇ ಮಗು ಲಸಿಕೆಯಿಂದ ತಪ್ಪಿಹೋಗದಂತೆ ಎಚ್ಚರಿಕೆ ವಹಿಸಬೇಕು. ಕೆಪಿಟಿಸಿಎಲ್ ಅಧಿಕಾರಿಗಳು ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಹಸಿರು ಹಾಸನ ಕಾರ್ಯಕ್ರಮದಡಿ ಎಲ್ಲ ಇಲಾಖೆ ಅಧಿಕಾರಿಗಳು ಜೂನ್‌ನಿಂದ ಆಗಸ್ಟ್‌ವರೆಗೆ ಗಿಡ ನೆಟ್ಟು ಪೋಷಣೆ ಮಾಡಲು ಪ್ರತಿ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು. ಸರ್ಕಾರಿ ಕಟ್ಟಡಗಳು ವಾಸಿಸಲು ಯೋಗ್ಯವಾಗಿಲ್ಲದಿರುವುದನ್ನು ಗುರುತಿಸಿ ತಾಂತ್ರಿಕವಾಗಿ ಇಂಜಿನಿಯರ್‌ಗಳು ಪರಿಶೀಲನೆ ಮಾಡಿ ಡೆಮಾಲಿಶ್ ಮಾಡಲು ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮೈಕ್ರೋ ಫೈನಾನ್ಸ್, ಚೈನ್ ಲಿಂಕ್ ಹಣಕಾಸು ವ್ಯವಹಾರ ನಡೆಸುವ ಕಂಪನಿಗಳನ್ನು ಗುರುತಿಸಿ ಅವರೊಂದಿಗೆ ಸಭೆ ನಡೆಸಬೇಕು. ಆ ಮೂಲಕ ಸಾರ್ವಜನಿಕರು ತೊಂದರೆಗೆ ಸಿಲುಕದಂತೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಕ್ರಮವಹಿಸಬೇಕು. ಬಯೋಮೇಡಿಕಲ್ ವೇಸ್ಟ್ ಅನ್ನು ಎಲ್ಲೆಂದರಲ್ಲಿ ಹಾಕುತ್ತಿರುವುದು ಕಂಡುಬರುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕಲ್ಯಾಣ ಮಂಟಪ, ಆಸ್ಪತ್ರೆ, ಹಾಸ್ಟೆಲ್ ಮತ್ತಿತರ ಕಡೆಗಳಲ್ಲಿ ಬಲ್ಕ್ ಆಗಿ ಉತ್ಪಾದನೆ ಆಗುವ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕಿದರೆ ವಿದ್ಯುತ್ ಕಡಿತಗೊಳಿಸುವುದರ ಜತೆಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅಪಘಾತಗಳು ಹೆಚ್ಚಾಗಿ ಸಂಭವಿಸುವ ಬ್ಲಾಕ್ ಸ್ಪಾಟ್ ಗುರುತಿಸಿ ಅಗತ್ಯ ಕ್ರಮ ಕೈಗೊಂಡು ಅಪಘಾತ ತಡೆಯುವ ಮೂಲಕ ಸಾವಿನ ಪ್ರಮಾಣ ಕಡಿಮೆ ಮಾಡಬೇಕು. ಸುರಕ್ಷತೆ ದೃಷ್ಟಿಯಿಂದ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕ್ರಮವಹಿಸಲು ತಿಳಿಸಿದರಲ್ಲದೆ, ಇಲಾಖೆ ವತಿಯಿಂದ ನಗರದ ಮುಖ್ಯ ವೃತ್ತಗಳಲ್ಲಿ ಎ.ಎನ್.ಪಿ.ಎಲ್ ಕ್ಯಾಮರಾ ಅಳವಡಿಕೆಗೆ ಕ್ರಮವಹಿಸಲು ಸೂಚನೆ ನೀಡಿದರು.
ಸೂಚನಾ ಮತ್ತು ಎಚ್ಚರಿಕೆ ಫಲಕ ಅಳವಡಿಸುವುದು, ರಿಪ್ಲೆಕ್ಟರ್ ಬಿಳಿ ಬಣ್ಣದ ಪಟ್ಟೆ ಹಾಕಿಸಲು ಕ್ರಮಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಜವಾಬ್ದಾರಿಯುತವಾಗಿ ಬಸ್ ಚಾಲನೆ ಮಾಡುವಂತೆ ಬಸ್ ಚಾಲಕರಿಗೆ ತರಬೇತಿ ನೀಡಿ ನಗರ ಪ್ರದೇಶಗಳಲ್ಲಿ ವೇಗದ ಮಿತಿ 40ಕ್ಕೆ ನಿಗದಿ ಪಡಿಸಬೇಕು. ವೃತ್ತಗಳಲ್ಲಿ ಎಚ್ಚರಿಕೆವಹಿಸಿ ಚಾಲನೆ ಮಾಡುವಂತೆ ಹಾಗೂ ನಿಗದಿತ ಸ್ಥಳಗಳಲ್ಲಿ ಮಾತ್ರ ಬಸ್ ನಿಲುಗಡೆ ಮಾಡಲು ಚಾಲಕರಿಗೆ ಸೂಚಿಸುವಂತೆ ಕೆಎಸ್‌ಆರ್‌ಟಿಸಿ ವಿಭಾಗಾಧಿಕಾರಿಗೆ ನಿರ್ದೇಶನ ನೀಡಿದರು.
ಅಪಘಾತಗಳನ್ನು ತಡೆಗಟ್ಟಿ ಮರಣ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆಟೋಗಳಿಗೆ ನಿಗದಿತ ಸ್ಥಳ ಗುರುತಿಸಿ ಎಂದರಲ್ಲದೆ, ಟ್ರಾೃಕ್ ನಿಲುಗಡೆಗೆ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರಸ್ತೆ ಸುರಕ್ಷತೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸಲು ಶಾಲೆಗಳಲ್ಲಿ ಪೋಸ್ಟರ್ ಅಳವಡಿಸಿ ಎಂದು ತಿಳಿಸಿದರು.
ರಸ್ತೆ ಒತ್ತುವರಿ ತೆರವಿಗೆ ಕ್ರಮವಹಿಸಬೇಕು. ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ವಹಿವಾಟು ನಡೆಸದಂತೆ ಎಚ್ಚರ ವಹಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಘನತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ಸ್ಥಳೀಯ ಸಂಸ್ಥೆಗಳು ನಿಗಾ ವಹಿಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಅನಧಿಕೃತವಾಗಿ ರಸ್ತೆ ಬದಿಗಳಲ್ಲಿ ಕಸ ಹಾಕುವುದನ್ನು ತಡೆಯಬೇಕು. ಕಸವಿದ್ದಲ್ಲಿ ತೆಗೆಸುವುದಕ್ಕೆ ಯಾವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ರಸ್ತೆಗಳು ಒಳಪಡುತ್ತದೆಯೋ ಅವರೇ ಅದರ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರತಿ ವಾರ್ಡ್‌ನಲ್ಲಿ ಸ್ವಚ್ಚತಾ ಸಮಿತಿ ರಚನೆಯಾಗಬೇಕು. ಸಾರ್ವಜನಕರು ಮೂಲದಲ್ಲಿಯೇ ಕಸ ವಿಗಂಡಣೆ ಮಾಡಿ ನೀಡಲು ಕ್ರಮವಹಿಸಬೇಕು. ಸ್ವಚ್ಛತೆ ಕಾಪಾಡಲು ಪ್ರವಾಸಿ ತಾಣ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಬೋರ್ಡ್ ಅಳವಡಿಸಬೇಕು ಎಂದು ತಿಳಿಸಿದರು.
ಕೈಗಾರಿಕೆಗಳಿಂದ ಕೆರೆ-ಕಟ್ಟೆಗಳಿಗೆ ತ್ಯಾಜ್ಯ ನೀರು ಬಿಡುವುದರಿಂದ ನೀರು ಕಲುಷಿತಗೊಂಡು ಬಳಕೆಗೆ ಯೋಗ್ಯವಾಗಿರುವುದಿಲ್ಲ ಇಂತಹದ್ದು ಕಂಡುಬಂದರೆ ಕೂಡಲೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲ ಪ್ರಾರಂಭವಾಗಿದ್ದು ಬೀಳುವ ಹಂತದಲ್ಲಿ ಇರುವ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ತೆರವು ಗೊಳಿಸಬೇಕು. ಜತೆಗೆ ವಿದ್ಯುತ್ ತಂತಿಗಳನ್ನು ಸರಿಪಡಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಉದ್ಯೋಗ ಮಹಿಳೆಯರಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಪ್ರಸ್ತುತ ಲಭ್ಯವಿರುವ ಕಟ್ಟಡದಲ್ಲಿ ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭಂ ಶುಕ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶ್ರೀನಿಧಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net