ಪುರಸಭೆ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್, ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಇತರರು ಪಟ್ಟಣದ ಸರ್ಕಾರಿ ನೌಕರರ ಭವನದ ಮುಂದಿನ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಬೇಲೂರು: ಬೇಲೂರು ಪಟ್ಟಣದ ಸಮಗ್ರ ಅಭಿವೃದ್ಧಿ ಹಿನ್ನೆಲೆಯಲ್ಲಿ ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳಲ್ಲೂ ನಗರೋತ್ಥಾನ ಹಾಗೂ ಎಸ್‌ಎಫ್‌ಸಿಗೆ ಸೇರಿದ 12 ಕೋಟಿ ರೂ. ಅನುದಾನದಲ್ಲಿ ರಸ್ತೆ, ಚರಂಡಿ ಸೆರಿದಂತೆ ವಿವಿಧ ಕಾಮಗಾರಿಗಳನ್ನು ಮಾಡಿಸಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಸಂಘದ ಮುಂಭಾಗದ ರಸ್ತೆಯಲ್ಲಿ ಸೋಮವಾರ 12 ಕೋಟಿ ರೂ.ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ಎಲ್ಲ ರಸ್ತೆಗಳು ಹದಗೆಟ್ಟು ಸಾಕಷ್ಟು ವರ್ಷಗಳೇ ಕಳೆದ ಹಿನ್ನೆಲೆಯಲ್ಲಿ ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳಲ್ಲೂ 12 ಕೋಟಿ ರೂ. ಅನುದಾನದಲ್ಲಿ ರಸ್ತೆ, ಚರಂಡಿ ನಿರ್ಮಿಸಿ ಅನುಕೂಲ ಕಲ್ಪಿಸಲು 15ನೇ ಹಣಕಾಸು ಯೋಜನೆಯಡಿ ಹಾಗೂ ಲೋಕೋಪಯೋಗಿ ಸಚಿವರಿಂದ ಹೆಚ್ಚಿನ ಅನುದಾನ ತಂದು ಒಟ್ಟು 12 ಕೋಟಿ ರೂ. ವೆಚ್ಚದಲ್ಲಿ 23 ವಾರ್ಡ್‌ಗಳ ರಸ್ತೆ, ಚರಂಡಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪಟ್ಟಣದ ರಸ್ತೆ, ಚರಂಡಿಗಳ ಕೆಲಸವಾಗಿರಲಿಲ್ಲ. ಜತೆಗೆ ರಾಜ್ಯದ 224 ಕ್ಷೇತ್ರಗಳ ಪೈಕಿ ಬೇಲೂರು ಕ್ಷೇತ್ರ ತುಂಬಾ ಹಿಂದುಳಿದಿದ್ದರಿಂದ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಸರ್ಕಾರ ಹಾಗೂ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಬೇಲೂರು ಪಟ್ಟಣವನ್ನು ಮಾದರಿಯನ್ನಾಗಿ ಮಾಡಲು ಪಣ ತೊಟ್ಟಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.
ಈ ಎಲ್ಲ ಕಾಮಗಾರಿಯಲ್ಲೂ ಗುತ್ತಿಗೆದಾರರು ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ. ಪಟ್ಟಣ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನನ್ನ ಮೊದಲು ಆದ್ಯತೆ ನೀಡಲಿದ್ದೇನೆ. ಮುಂದಿನ ದಿನಗಳಲ್ಲೂ ಇನ್ನೂ ಹೆಚ್ಚು ಅನುದಾನ ತಂದು ಕೆಲಸ ಮಾಡಿಸಲಾಗುವುದು ಎಂದು ತಿಳಿಸಿದರು.
ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ರಸ್ತೆಗಳು ತುಂಬಾ ಹಾಳಾಗಿ ವಿವಿಧ ವಾರ್ಡ್‌ಗಳ ರಸ್ತೆಯಲ್ಲಿ ಸಾರ್ವಜನಿಕರು ಓಡಾಡಲು ಹರಸಾಹಸ ಪಡಬೇಕಿತ್ತು, ಅದನ್ನು ಮನಗಂಡು ಪುರಸಭೆಯ 23 ವಾರ್ಡ್‌ಗಳಲ್ಲೂ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕರ ನೇತೃತ್ವದಲ್ಲಿ ನಗರೋತ್ಥಾನ ಹಾಗೂ ಎಸ್‌ಎಫ್‌ಸಿ ಅನುದಾನದಲ್ಲಿ ಭೂಮಿಪೂಜೆ ಕೈಗೊಳ್ಳಲಾಗುತ್ತಿದೆ. ಜತೆಗೆ ಗುತ್ತಿಗೆದಾರರು ಕೆಲಸವನ್ನು ಗುಣಮಟ್ಟದಲ್ಲಿ ಮಾಡಬೇಕು ಎಂದರು.