ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ

ಬಾಳುಪೇಟೆ ಸಮೀಪ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಶಾಸಕ ಸಿಮೆಂಟ್ ಮಂಜು ವೀಕ್ಷಿಸಿದರು. ಮುರುಗೇಶ್, ಹರೀಶ್ ಇತರರಿದ್ದರು.
ಬಾಳುಪೇಟೆ ಸಮೀಪ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಶಾಸಕ ಸಿಮೆಂಟ್ ಮಂಜು ವೀಕ್ಷಿಸಿದರು. ಮುರುಗೇಶ್, ಹರೀಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿಮೆಂಟ್ ಮಂಜು
  • ಬಾಳ್ಳುಪೇಟೆ
ಸಕಲೇಶಪುರ: ಗುಣಮಟ್ಟ ಕಾಪಾಡಿಕೊಳ್ಳುವುದರ ಜತೆಗೆ ನಿಗದಿತ ಅವಧಿಯೊಳಗೆ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ಶಾಸಕ ಸಿಮೆಂಟ್ ಮಂಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆಯುತ್ತಿರುವ ನೂತನ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ತೀರ ಹದಗೆಟ್ಟು ಸಾರ್ವಜನಿಕರ ಸಂಚಾರಕ್ಕೆ ಅಸಾಧ್ಯವಾಗಿದ್ದ ರಾಜ್ಯ ಹೆದ್ದಾರಿ 112ರ ಬೇಲೂರು-ಸೋಮವಾರಪೇಟೆ ರಸ್ತೆಯನ್ನು ಬಾಳ್ಳುಪೇಟೆಯಿಂದ ಜಮ್ಮನಹಳ್ಳಿವರೆಗೆ ಸುಮಾರು 3 ಕಿ.ಮೀ. ಉದ್ದ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.
7 ಮೀಟರ್‌ವರೆಗೆ ದ್ವಿಪಥ ರಸ್ತೆ ನಿರ್ಮಾಣ, 5 ಮೋರಿಗಳ ನಿರ್ಮಾಣ, ಬಾಳ್ಳುಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಮೋರಿ ಹಾಗೂ ಆಯ್ದ ಭಾಗಗಳಲ್ಲಿ ಚರಂಡಿ ನಿರ್ಮಾಣ, ರಸ್ತೆ ಸುರಕ್ಷತಾ ಸಂಬಂಧಿತ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕಾಮಗಾರಿ ವೀಕ್ಷಣೆ ವೇಳೆ ಕೆಲವು ಸ್ಥಳಗಳಲ್ಲಿ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಅನುದಾನ ಸದ್ಬಳಕೆಯಾಗುವಂತೆ ಎಲ್ಲರೂ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಬೇಕೆಂದು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ತಿಳಿಸಿದರು.
ಇಲಾಖೆಗಳ ನಡುವೆ ಸಮನ್ವಯ ಕೊರತೆ ಕಂಡುಬಂದರೆ ಕಾಮಗಾರಿ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟ ಅವರು, ಲೋಕೋಪಯೋಗಿ ಇಲಾಖೆ ಹಾಗೂ ಸೆಸ್ಕ್ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮುರುಗೇಶ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹರೀಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net