ಹಾಸನ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಹಾಸನ ಸ್ಪರ್ಧಾ ಕುಟೀರವನ್ನು ಗಣ್ಯರು ಉದ್ಘಾಟಿಸಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್ ಪೀರ್, ಗ್ರಂಥಾಯಲದ ಅಧಿಕಾರಿಗಳಾದ ನಳಿನಿ, ಹಸಿನ ತಾಜ್, ಎಸಿಎಫ್ ಮೋಹನ್, ತಹಸೀಲ್ದಾರ್ ಗೀತಾ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ
ಸಂಸದ ಶ್ರೇಯಸ್ ಎಂ.ಪಟೇಲ್ ಸಲಹೆ
ಹಾಸನ ಸ್ಪರ್ಧಾ ಕುಟೀರ ಉದ್ಘಾಟನೆ
ಹಾಸನ:ಜಿಲ್ಲೆಯ ಯುವ ಜನರು ದೊಡ್ಡ ಕನಸು ಕಾಣುವುದರ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಂಡು ಯಶಸ್ವಿಯಾಗಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸುವಂತೆ ಸಂಸದ ಶ್ರೇಯಸ್ ಎಂ.ಪಟೇಲ್ ಹೇಳಿದರು.
ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಹಾಸನ ಸ್ಪರ್ಧಾ ಕುಟೀರ ಉದ್ಘಾಟಿಸಿ ಮಾತನಾಡಿ, ಈ ಕುಟೀರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಅಧ್ಯಯನ ಮಾಡಲು ಅನುಕೂಲವಾಗುವಂತೆ ಉತ್ತಮ ರೀತಿಯಲ್ಲಿ ಸಜ್ಜಗೊಳಿಸಿದ್ದು, ಈ ಕೇಂದ್ರವನ್ನು ಬಳಸಿಕೊಂಡು ಯುವ ಜನರು ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ತಿಳಿಸಿದರು.
ಈಗಾಗಲೇ 75 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನರು ನೋಂದಣಿ ಮಾಡಿಕೊಂಡು ಅಧ್ಯಯನ ಮಾಡಬೇಕು. ನೂತನ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಬಾಕಿ ಉಳಿದಿರುವ ಕೆಲಸಕ್ಕೆ ಅನುದಾನ ತಂದು ಕಾಯಕಲ್ಪ ನೀಡಲಾಗುವುದು ಎಂದರು.
ನಂತರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಆವರಣದಲ್ಲಿ ಸಸಿ ನೆಟ್ಟು ಮಾತನಾಡಿ, ಯಾವುದೇ ಫಲಾಪೇಕ್ಷೆ ಇಲ್ಲದೆ ಶುದ್ಧ ಗಾಳಿ, ನೀರು ನೀಡುವ ಪ್ರಕೃತಿಯನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಜಿಲ್ಲಾಡಳಿತ ಉತ್ತಮ ನಿರ್ಧಾರ ತೆಗೆದುಕೊಂಡು ಜಿಲ್ಲೆಯಲ್ಲಿ 7-8 ಲಕ್ಷ ಸಸಿಗಳನ್ನು ನೆಟ್ಟು ಪೋಷಣೆ ಮಾಡಲು ಮುಂದಾಗಿದೆ. ಇದು ಇತಿಹಾಸದ ಪುಟಗಳಲ್ಲಿ ದಾಖಲಾಗುವಂತಹ ಕೆಲಸವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಾವು ಆರೋಗ್ಯಕರವಾಗಿ ಜೀವಿಸಲು ಕಾರಣವಾದ ಪ್ರಕೃತಿಗೆ ಏನು ಕೊಡುಗೆ ನೀಡುತ್ತಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳುವುದರ ಮೂಲಕ ಉತ್ತಮ ಪರಿಸರ ನಿರ್ಮಾಣಕ್ಕಾಗಿ ಕಾರ್ಯೋನ್ಮುಖರಾಗಬೇಕು ಎಂದರು.
ಸಮಾಜದ ಜವಾಬ್ದಾರಿಯುತ ಪ್ರಜೆಯಾಗಿ ಪರಿಸರ ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಬೇಕು ಎಂದು ಹೇಳಿದರು.
ಮನುಕುಲ ನೆಮ್ಮದಿ ಜೀವನ ನಡೆಸಲು ಸಹಕಾರಿ ಆಗುವಂತೆ ನಮ್ಮ ದೊಡ್ಡ ಶತ್ರುವಾದ ಪ್ಲಾಸ್ಟಿಕ್ ಬಳಕೆಯನ್ನು ಮಿತಗೊಳಿಸಬೇಕು ನೀರನ್ನು ಕೂಡ ಮಿತವಾಗಿ ಬಳಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಲತಾ ಕುಮಾರಿ ಮಾತನಾಡಿ, ಹಾಸನ ಸ್ಪರ್ಧಾ ಕುಟೀರದ ಸದುಪಯೋಗ ಪಡಿಸಿಕೊಂಡು ಪ್ರತಿಫಲ ನೀಡುವ ಹೊಣೆಗಾರಿಕೆ ಯುವ ಜನತೆಯ ಮೇಲಿದೆ. ಈ ನಿಟ್ಟಿನಲ್ಲಿ ಆಸಕ್ತಿವಹಿಸಿ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಇದೊಂದು ಸುವರ್ಣಾವಕಾಶ ಎಂದರು.
ಪ್ರತಿಯೊಬ್ಬ ಮಕ್ಕಳಿಗೂ ಜೀವನಕ್ಕೆ ಬುನಾದಿಯಾಗಿ ಶಿಕ್ಷಣಬೇಕು. ಈ ಕುಟೀರವು ಯುವ ಜನತೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಒಂದು ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಈ ಕುಟೀರ ನೆರವಾಗಲಿದೆ. ವೈಫೈ ವ್ಯವಸ್ಥೆ ಹಾಗೂ ಇಂಟರ್‌ನೆಟ್ ಸಂಪರ್ಕ ಕಲ್ಪಿಸಲಾಗಿದೆ ಎಂದರು.
ಹಸಿರು ಹಾಸನ ನಿರ್ಮಾಣ ಮಾಡಲು 7-8 ಲಕ್ಷ ಸಸಿಗಳನ್ನು ಜೂನ್‌ನಿಂದ ಆಗಸ್ಟ್ ತಿಂಗಳಿನಲ್ಲಿ ನೆಟ್ಟು ಪೋಷಣೆ ಮಾಡಲು ನಿರ್ಧರಿಸಲಾಗಿದ್ದು, ಸಾರ್ವಜನಿಕರೂ ಸಹಕಾರ ನೀಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ದೂದ್ ಪೀರ್, ಗ್ರಂಥಾಯಲದ ಅಧಿಕಾರಿಗಳಾದ ನಳಿನಿ, ಹಸಿನ ತಾಜ್, ಎಸಿಎಫ್ ಮೋಹನ್, ತಹಸೀಲ್ದಾರ್ ಗೀತಾ ಇದ್ದರು.