ದ್ವಿತೀಯ ಪಿಯು ಪರೀಕ್ಷೆಯಲ್ಲಿ ದೊಡ್ಡಮಗ್ಗೆ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ

 ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕನರನ್ನು ಸನ್ಮಾನಿಸಲಾಯಿತು. ಶಾಸಕ ಎ. ಮಂಜು, ಎಂ.ಆರ್.ಮಂಜುನಾಥ್, ಫರ್ಜಾನ್ ಅಂಜುಂ, ಬಾಬುವರ್ಧನ್, ಶಶಿಧರ್ ಇತರರಿದ್ದರು.
ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕನರನ್ನು ಸನ್ಮಾನಿಸಲಾಯಿತು. ಶಾಸಕ ಎ. ಮಂಜು, ಎಂ.ಆರ್.ಮಂಜುನಾಥ್, ಫರ್ಜಾನ್ ಅಂಜುಂ, ಬಾಬುವರ್ಧನ್, ಶಶಿಧರ್ ಇತರರಿದ್ದರು.
Published on

ವಿದ್ಯಾರ್ಥಿಗಳು, ಉಪನ್ಯಾಸಕರ ಸಾಧನೆಗೆ ಶಾಸಕ ಎ.ಮಂಜು ಶ್ಲಾಘನೆ

ಅರಕಲಗೂಡು: ಗುಣಮಟ್ಟದ ಶಿಕ್ಷಣ ನೀಡುವ ಮುಖೇನ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪೈಕಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು ಉತ್ತಮ ಬೋಧನೆಯ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿರುವ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಗೆ ಅರ್ಹರು ಎಂದು ಶಾಸಕ ಎ.ಮಂಜು ಹೇಳಿದರು.
ತಾಲೂಕಿನ ದೊಡ್ಡಮಗ್ಗೆ ಬಿಜಿಎಸ್ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ದ್ವಿತೀಯ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಶಾಸಕರು, ಮುಂದೆಯೂ ಇದೇ ಸಾಧನೆಯನ್ನು ಮುಂದುವರಿಸಿಕೊಂಡು ಉನ್ನತ ಶಿಕ್ಷಣದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 330ಕ್ಕೂ ಅಧಿಕ ವಿದ್ಯಾರ್ಥಿಗಳು ದಾಖಲಾತಿಯಾಗಿರುವುದು ಗಮನಾರ್ಹ ಸಂಗತಿ. ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಪಾಲಕರ ಒಲವು ಹೆಚ್ಚುತ್ತಿರುವ ಇಂದಿನ ಸಂದರ್ಭದಲ್ಲಿ ಸರ್ಕಾರಿ ಕಾಲೇಜಿನ ಮೇಲಿನ ವಿಶ್ವಾಸದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ದಾಖಲಿಸಿರುವುದು ಹೆಮ್ಮೆಯ ವಿಷಯವಾಗಿದೆ. ಪಾಲಕರ ನಿರೀಕ್ಷೆಗೆ ತಕ್ಕಂತೆ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಫಲಿತಾಂಶ ನೀಡುವ ಮೂಲಕ ಕಾಲೇಜಿನ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಉಪನ್ಯಾಸಕರಿಗೆ ಸಲಹೆ ನೀಡಿದರು.
ಮುಂದಿನ ದಿನಗಳಲ್ಲಿ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಕೆಪಿಎಸ್ ಶಾಲೆಯಾಗಿ ಕಾರ್ಯನಿರ್ವಹಿಸಲಿದ್ದು, ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ದೊರೆಯಲಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಅನುಕೂಲವಾಗುವುದರ ಜತೆಗೆ ಶಿಕ್ಷಕರ ಕೊರತೆ ಸೇರಿದಂತೆ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಅಗತ್ಯ ಮೂಲಸೌಕರ್ಯಗಳನ್ನು ಈಗಾಗಲೇ ಕಲ್ಪಿಸಲಾಗಿದ್ದು, ಮುಂದೆಯೂ ಬೇಕಾದ ಎಲ್ಲ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ಕಾಲೇಜಿನ ಸುಮಾರು 25ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಪನ್ಯಾಸಕರು ವೈಯಕ್ತಿಕವಾಗಿ ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸುತ್ತಿರುವುದು ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿಯಾಗಿದೆ. ಇದೇ ವೇಳೆ ಕಾಲೇಜಿನ ಪ್ರಾಂಶುಪಾಲರು ಸಹ ಉಪನ್ಯಾಸಕರಿಗೆ ತಲಾ 5 ಸಾವಿರ ರೂ. ನಗದು ಬಹುಮಾನ ನೀಡಿ ಗೌರವಿಸಿರುವುದು ಶ್ಲಾಘನೀಯ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಫರ್ಜಾನಾ ಅಂಜುಂ ಮಾತನಾಡಿ, ದೊಡ್ಡಮಗ್ಗೆ ಕಾಲೇಜಿಗೆ ಪ್ರಾಂಶುಪಾಲರಾಗಿ ಬಂದ ಆರಂಭದಲ್ಲಿ ಆತಂಕವಿತ್ತು. ಆದರೆ ಶಾಸಕರು, ಉಪನ್ಯಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರ ಸಹಕಾರದಿಂದ ಆತ್ಮವಿಶ್ವಾಸ ಹೆಚ್ಚಿದ್ದು, ಈ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವುದು ನನಗೆ ಅಪಾರ ತೃಪ್ತಿ ತಂದಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ.ಆರ್.ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕ್, ಸಮಿತಿಯ ಸದಸ್ಯರು, ಉಪನ್ಯಾಸಕರಾದ ಶಶಿಧರ್, ಬಾಬು ವರ್ಧನ್, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net