ಆಲೂರು: ಎತ್ತಿನಹೊಳೆ ಯೋಜನೆಯ ಕಾಮಗಾರಿಯಿಂದ ರೈತರ ಜಮೀನುಗಳಿಗೆ ತೆರಳಲು, ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಂಚರಿಸಲು ತೊಂದರೆಯಾಗಬಾರದು. ಯೋಜನೆ ಜಾರಿಗೊಳಿಸುವ ಹೆಸರಿನಲ್ಲಿ ಜನಜೀವನ ಅಸ್ತವ್ಯಸ್ತಗೊಳಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಶಾಸಕ ಸಿಮೆಂಟ್ ಮಂಜು ಎಚ್ಚರಿಕೆ ನೀಡಿದರು.
ತಾಲೂಕಿನ ಮಡಬಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಕಾಮಗಾರಿಯಿಂದ ರಸ್ತೆ ಹಾಳಾಗಿ ರೈತರು ತಮ್ಮ ಜಮೀನುಗಳಿಗೆ ತೆರಳಲು ಹಾಗೂ ಸಾರ್ವಜನಿಕ ಸಾರಿಗೆ ಬಸ್‌ಗಳ ಸಂಚಾರಕ್ಕೂ ತೀವ್ರ ಅಡಚಣೆ ಉಂಟಾಗಿರುವ ಬಗ್ಗೆ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು.
ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಮಂಜು, ಯೋಜನೆ ಕಾಮಗಾರಿ ಮಾಡುವುದು ಮುಖ್ಯವೇ ಸರಿ. ಆದರೆ ಅದಕ್ಕಾಗಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ. ಕಾಮಗಾರಿ ಮಾಡುವಾಗ ಜನರಿಗೆ ಆಗುವ ತೊಂದರೆಯನ್ನು ಮುಂಚಿತವಾಗಿಯೇ ಪರಿಗಣಿಸಬೇಕಿತ್ತು. ಇಂಜಿನಿಯರ್‌ಗಳು ಸ್ಥಳೀಯ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಯೋಜನೆ ರೂಪಿಸಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮಸ್ಥರು ಅಂಡರ್‌ಪಾಸ್ ನಿರ್ಮಾಣಕ್ಕೆ ಅವಕಾಶವೇ ಇಲ್ಲದಂತೆ ರಸ್ತೆ ನಿರ್ಮಿಸಲಾಗಿದೆ ಎಂದು ಆರೋಪಿಸಿದ್ದು, ಅಧಿಕಾರಿಗಳು ತಮ್ಮ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ ಅಧಿಕಾರಿಗಳ ಸಮರ್ಥನೆಗಿಂತ ಸಾರ್ವಜನಿಕರ ಅನುಕೂಲವೇ ಮುಖ್ಯ ಎಂದು ಶಾಸಕರು ಸ್ಪಷ್ಟಪಡಿಸಿದರು.
ಯಾವ ತಾಂತ್ರಿಕ ಪರಿಹಾರ ಬೇಕಾದರೂ ಕಂಡುಕೊಳ್ಳಿ. ಆದರೆ ರೈತರು ಜಮೀನುಗಳಿಗೆ ಹೋಗಲು, ವಿದ್ಯಾರ್ಥಿಗಳು ಶಾಲೆಗೆ ತೆರಳಲು ಹಾಗೂ ಬಸ್ ಸಂಚಾರ ನಿರಂತರವಾಗಿರಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆಲೂರು ತಾಲೂಕು ಕೇಂದ್ರದ ಸಂಪರ್ಕ ಕಡಿತವಾಗುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಇಂಜಿನಿಯರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಳೆ ಕಡಿಮೆಯಾದ ತಕ್ಷಣ ತಾತ್ಕಾಲಿಕ ಹಾಗೂ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಂಡು ರಸ್ತೆ ಸುಗಮಗೊಳಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದು, ಕಾಮಗಾರಿ ವಿಳಂಬವಾಗದಂತೆ ಹಾಗೂ ಸಾರ್ವಜನಿಕರಿಗೆ ಮತ್ತಷ್ಟು ತೊಂದರೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದರು.