ಕಾರ್ಮಿಕ ವಿರೋಧಿ ಕಾಯ್ದೆ ವಿರುದ್ಧ ಸಮರ

ಕಾರ್ಮಿಕ ವಿರೋಧಿ ನೀತಿ ಹಾಗೂ ನೂತ ಕಾರ್ಮಿಕ ಸಂಹಿತೆಗಳನ್ನು ರದ್ದು ಪಡಿಸುವಂತೆ ಆಗ್ರಹಿಸಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ, ಆಶಾ, ಬಿಸಿಯೂಟ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಮಂಜುಳಾ, ಭಾರತೀಗೌಡ, ಇಂದ್ರಮ್ಮ, ಮಹಾದೇವಿ, ಈರಯ್ಯ ಇತರರಿದ್ದರು.
ಕಾರ್ಮಿಕ ವಿರೋಧಿ ನೀತಿ ಹಾಗೂ ನೂತ ಕಾರ್ಮಿಕ ಸಂಹಿತೆಗಳನ್ನು ರದ್ದು ಪಡಿಸುವಂತೆ ಆಗ್ರಹಿಸಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ, ಆಶಾ, ಬಿಸಿಯೂಟ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಮಂಜುಳಾ, ಭಾರತೀಗೌಡ, ಇಂದ್ರಮ್ಮ, ಮಹಾದೇವಿ, ಈರಯ್ಯ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಿಐಟಿಯು ನೇತೃತ್ವದಲ್ಲಿ ಬೃಹತ್ ಮೆರವಣಿಗೆ
ಬೇಲೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನೀತಿ ಹಾಗೂ ನೂತನ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದು ಪಡಿಸುವಂತೆ ಆಗ್ರಹಿಸಿ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ ಮುಷ್ಕರ ಬೆಂಬಲಿಸಿ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು.
ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ, ಆಶಾ, ಬಿಸಿಯೂಟ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಗುರುವಾರ ಬೃಹತ್ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಬಿಸಿಯೂಟ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಮಂಜುಳಾ ಮಾತನಾಡಿ, ಕೇಂದ್ರ ಸರ್ಕಾರ ಕಾರ್ಮಿಕರ ಹಿತ ಕಾಪಾಡುವ 29 ಕಾಯ್ದೆಗಳನ್ನು ರದ್ದುಮಾಡಿ, ಮಾಲೀಕರ ಪರವಾದ 4 ಹೊಸ ಸಂಹಿತೆಗಳನ್ನು ಜಾರಿಗೆ ತಂದಿದೆ. ಇದನ್ನು ರಾಜ್ಯ ಸರ್ಕಾರ ಸಹ ಬೆಂಬಲಿಸಿರುವುದನ್ನು ಖಂಡಿಸುತ್ತೇವೆ. ಹೊಸ ಸಂಹಿತೆಯಿಂದ ಕಾರ್ಖಾನೆಗಳ ಸ್ಕೀಮ್ ನೌಕರರು ಮತ್ತು ಗ್ರಾಮ ಪಂಚಾಯಿತಿ ನೌಕರರಿಗೆ ತೀವ್ರ ತೊಂದರೆಯಾಗಲಿದ್ದು, ಖಾಸಗೀಕರಣಕ್ಕೆ ದಾರಿ ಮಾಡಿ ಕೊಟ್ಟಂತಾಗಿದೆ. ಇದರೊಂದಿಗೆ ಅಂಗನವಾಡಿ ಮತ್ತು ಬಿಸಿಯೂಟ ನೌಕರರನ್ನು ಬೀದಿಗೆ ತಳ್ಳುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಅಂಗನವಾಡಿ ನೌಕರರಿಗೆ ಕೇವಲ 2000-4000 ರೂ. ಹಾಗೂ ಬಿಸಿಯೂಟ ನೌಕರರಿಗೆ ಅತ್ಯಲ್ಪ ಗೌರವಧನ ನೀಡುವ ಮೂಲಕ ಶೋಷಣೆ ಮಾಡುತ್ತಿವೆ. ಆದ್ದರಿಂದ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿಯ ಸಂಹಿತೆಗಳನ್ನು ವಾಪಸ್ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಕಾಮಾಕ್ಷಿ ರಾಜು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರನ್ನು ಕಾಲು ಕಸದಂತೆ ನೋಡುತ್ತಿವೆ. ಕಾರ್ಮಿಕರ ಪರವಿದ್ದ ಕಾನೂನಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದು 4 ಹೊಸ ಸಂಹಿತೆಗಳನ್ನು ಜಾರಿಗೆ ತಂದಿರುವುದರ ಹಿಂದೆ ದೊಡ್ಡ ಹುನ್ನಾರವಿದೆ. ಹಿಂದೆ ಹೋರಾಟ ಮಾಡಿದ ಪರಿಣಾಮ ಈ ಪ್ರಕ್ರಿಯೆ ತಡೆಯಲಾಗಿತ್ತು. ಆದರೆ, ಈಗ ಕೇಂದ್ರ ಸರ್ಕಾರ ಏಕಾಏಕಿ ಸಂಹಿತೆಗಳನ್ನು ಜಾರಿಗೆ ತರುತ್ತಿದ್ದು, ರಾಜ್ಯ ಸರ್ಕಾರವೂ ಅದನ್ನು ಅನುಸರಿಸುತ್ತಿರುವುದು ಸರಿಯಲ್ಲ ಎಂದರು.
ದೇಶಾದ್ಯಂತ ಎಲ್ಲ ಕಾರ್ಮಿಕ ಸಂಘಟನೆಗಳು ಒಗ್ಗೂಡಿ ಈ ಹೋರಾಟ ಮಾಡುತ್ತಿವೆ. ಸರ್ಕಾರ ಕೂಡಲೇ ಈ ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಲು ಕಾರ್ಮಿಕರು ಸಜ್ಜಾಗಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ನಂತರ ಅಂಚೆ ಕಚೇರಿಯ ವ್ಯವಸ್ಥಾಪಕ ಮೋಹನ್ ಕುಮಾರ್‌ಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಹಿಳಾ ಒಕ್ಕೂಟದ ತಾಲೂಕು ಅಧ್ಯಕ್ಷ ಭಾರತೀಗೌಡ, ಸಿಐಟಿಯುನ ಇಂದ್ರಮ್ಮ, ಬಿಸಿ ಊಟ ನೌಕರರ ಸಂಘದ ತಾಲೂಕು ಉಪಾಧ್ಯಕ್ಷೆ ಮಹಾದೇವಿ, ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಈರಯ್ಯ, ಕಾರ್ಯದರ್ಶಿ ಗಣೇಶ್, ವೇದಾವತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net