ಹಳ್ಳಿಗಳ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ

ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಪಂಚಾಯತ್‌ರಾಜ್ ದಿವಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಕೃಷ್ಣಮೂರ್ತಿ, ಎಚ್.ಡಿ.ಗಿರೀಶ್, ಸಿ.ಬಿ.ದಿನೇಶ್ ಇತರರಿದ್ದರು.
ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಪಂಚಾಯತ್‌ರಾಜ್ ದಿವಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಕೃಷ್ಣಮೂರ್ತಿ, ಎಚ್.ಡಿ.ಗಿರೀಶ್, ಸಿ.ಬಿ.ದಿನೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹಳ್ಳಿಗಳ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ
  • ಜಿ.ಪಂ. ಮುಖ್ಯ ಯೋಜನಾಧಿಕಾರಿ ಕೃಷ್ಣಮೂರ್ತಿ ಸೂಚನೆ
  • ಪಂಚಾಯತ್ ರಾಜ್ ದಿವಸ್
ಹಾಸನ: ಗ್ರಾಮೀಣ ಭಾಗದ ಜನರ ಜೀವನವನ್ನು ಉತ್ತಮಗೊಳಿಸಲು ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಹಾಸನ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಕೃಷ್ಣಮೂರ್ತಿ ಅವರು ಸೂಚನೆ ನೀಡಿದರು.
ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಪಂಚಾಯತ್‌ರಾಜ್ ದಿವಸ್ ಕಾರ್ಯಕ್ರಮದಲ್ಲಿ ಅಬ್ದುಲ್ ನಜೀರ್ ಸಾಬ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಗ್ಗಟ್ಟಾಗಿ ಕೆಲಸ ನಿರ್ವಹಿಸಿದರೆ ಮಾತ್ರ ಒಂದು ಗ್ರಾಮ ಪಂಚಾಯಿತಿಯನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಬಹುದು ಎಂದರು.
ಹಾಸನ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಡಿ.ಗಿರೀಶ್ ಮಾತನಾಡಿ, ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಾರ್ವಜನಿಕರಿಗೆ ಯಾವುದೇ ಮೂಲ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.
ಗ್ರಾಮ ಪಂಚಾಯತಿ ಮಟ್ಟದಲ್ಲಿ ಇರುವಂತಹ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡುವ ಜತೆಗೆ ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯೋಗವಾಗುವ ಪುಸ್ತಕಗಳನ್ನು ಗ್ರಂಥಾಲಯದಲ್ಲಿ ಇರಿಸಿ ವಿದ್ಯಾರ್ಥಿಗಳ ಓದಿಗೆ ನೆರವಾಗುವಂತೆ ಸೂಚನೆ ನೀಡಿದರು.
ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರತಿನಿತ್ಯ ಹಳ್ಳಿಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಅಹವಾಲುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುವಂತೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒ, ಕಾರ್ಯದರ್ಶಿ, ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ನೀರುಗಂಟಿ, ಗ್ರಾಮ ಪಂಚಾಯಿತಿ ಮಟ್ಟದ ಅರಿವು ಕೇಂದ್ರಗಳ ಮೇಲ್ವಿಚಾರಕರಿಗೆ ಸನ್ಮಾನಿಸಿ ಪ್ರಶಸ್ತಿ ಪ್ರಮಾಣ ಪತ್ರ ವಿತರಣೆ ಮಾಡಿದರು. ಹಾಸನ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಿ.ಬಿ.ದಿನೇಶ್ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ಇನ್ನಿತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net