ಅರಕಲಗೂಡು ತಾಲೂಕಿನ ಹೆಬ್ಬಾಲೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಶಾಸಕ ಎ. ಮಂಜು ಮಾತನಾಡಿದರು. ಲಕ್ಷ್ಮಣ್, ನರಸೇಗೌಡ ಇತರರಿದ್ದರು.
ಅರಕಲಗೂಡು:ವಿದ್ಯಾರ್ಥಿ ಜೀವನದಲ್ಲಿ ಗುರಿ ಅತ್ಯಂತ ಮುಖ್ಯವಾಗಿದ್ದು, ಕನಸು ಕಾಣದ ವ್ಯಕ್ತಿಗೆ ನಿರೀಕ್ಷಿತ ಗುರಿಯನ್ನು ತಲುಪುವುದು ಅಸಾಧ್ಯ ಶಾಸಕ ಎ. ಮಂಜು ಹೇಳಿದರು.
ತಾಲೂಕಿನ ಹೆಬ್ಬಾಲೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಹಾಗೂ ಭಾರತ ಸೇವಾದಳ, ಸ್ಕೌಟ್ಸ್ ಆಂಡ್ ಗೈಡ್ಸ್, ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಿದಾಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಜೀವನದಲ್ಲಿ ಒಂದು ನಿರ್ದಿಷ್ಟ ಗುರಿಯನ್ನು ಹೊಂದಿ, ಅದನ್ನು ಸಾಧಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ತಮ್ಮ ಪಾಲಕರ ನಂಬಿಕೆ ಹಾಗೂ ಗುರುಗಳ ವಿಶ್ವಾಸವನ್ನು ಗಳಿಸಬೇಕು. ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ಸಮಾಜದಲ್ಲಿ ಸಾಧನೆ ಮಾಡಿದ ಆದರ್ಶ ವ್ಯಕ್ತಿಗಳ ಜೀವನವನ್ನು ಅಧ್ಯಯನ ಮಾಡಿ, ಅವರ ಉತ್ತಮ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ತಾಲೂಕಿನಲ್ಲಿ ಆರಂಭಗೊಂಡಿರುವ ಮಕ್ಕಳ ಮನೆ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಉತ್ತೇಜನ ನೀಡುವಂತಹ ಉತ್ತಮ ಯೋಜನೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮಣ್, ಪಿ.ಬಿ. ವಿರೂಪಾಕ್ಷ, ಕೃಷ್ಣೇಗೌಡ, ನರಸೇಗೌಡ, ಇತರರಿದ್ದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.