ಅರಕಲಗೂಡು: ಹಲವಾರು ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವ ಅರ್ಹ ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಮೀನು ಮಂಜೂರು ಮಾಡಲಾಗುತ್ತಿದೆ ಎಂದು ಶಾಸಕ ಎ.ಮಂಜು ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ದರಖಾಸ್ತು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮೂನೆ-50 ಹಾಗೂ ನಮೂನೆ-53ರಡಿ ಅರ್ಜಿ ಸಲ್ಲಿಸಿದ್ದ 16 ರೈತ ಫಲಾನುಭವಿಗಳಿಗೆ ಸರ್ಕಾರಿ ಜಮೀನು ಮಂಜೂರು ಮಾಡುವ ನಿರ್ಧಾರಕ್ಕೆ ಸಮಿತಿಯು ಅನುಮೋದನೆ ನೀಡಿದೆ ಎಂದರು.
ಸರ್ಕಾರಿ ಜಮೀನನ್ನು ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಮಂಜೂರಾತಿಗಾಗಿ ಕಾಯುತ್ತಿರುವ ರೈತರಿಗೆ ಅನುಕೂಲ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿಯೂ ಅನಧಿಕೃತ ಸಾಗುವಳಿ ಮಾಡುತ್ತಿರುವ ಎಲ್ಲ ಅರ್ಹ ರೈತರ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಜಮೀನು ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ದರಖಾಸ್ತು ಸಮಿತಿ ಕಾರ್ಯದರ್ಶಿಯಾಗಿರುವ ತಹಸೀಲ್ದಾರ್ ಕೆ.ಸಿ.ಸೌಮ್ಯಾ, ಶಿರಸ್ತೇದಾರ್ ಸೋಮಶೇಖರ್, ಸಮಿತಿಯ ಸದಸ್ಯರು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.