ಶ್ರವಣಬೆಳಗೊಳದಲ್ಲಿ ಶುಕ್ರವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟವನ್ನು ಶಾಸಕ ಸಿ.ಎನ್.ಬಾಲಕೃಷ್ಣ ಉದ್ಘಾಟಿಸಿದರು. ಸಿ.ಎನ್.ಗೋಪಾಲ್, ಎಚ್.ಎನ್. ಲೋಕೇಶ್ ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
sports activities
ಶ್ರವಣಬೆಳಗೊಳ:
ಶಿಕ್ಷಣದ ಜತೆಗೆ ಕ್ರೀಡಾಭ್ಯಾಸಕ್ಕೂ ಮಕ್ಕಳು ಆದ್ಯತೆ ನೀಡಬೇಕು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಪೂರಕವಾಗಿದ್ದು, ಪ್ರಾಥಮಿಕ ಹಂತದಲ್ಲೇ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಪಟ್ಟಣದ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರವು ಹೋಬಳಿ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟಗಳಿಗೂ ಸೂಕ್ತ ಅನುದಾನ ನೀಡುವ ಮೂಲಕ ಕ್ರೀಡಾ ವಿದ್ಯಾರ್ಥಿಗಳನ್ನು ಉತ್ತೇಜಿಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಪ್ರತಿಭೆ ಇದೆ. ಆದರೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನದ ಕೊರತೆಯಿಂದ ಪ್ರತಿಭೆಗಳು ಬೆಳಕಿಗೆ ಬರುತ್ತಿಲ್ಲ. ಆದ್ದರಿಂದ ಕನಿಷ್ಠ ಪ್ರತಿ ಹೋಬಳಿಗೆ ಒಬ್ಬರು ದೈಹಿಕ ಶಿಕ್ಷಕರನ್ನು ನೇಮಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕಿನ ಹಲವು ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ಕೊರತೆ ಇದೆ. ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸಲು ಅಗತ್ಯವಿರುವ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಬೇಕು. ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಕೆಪಿಎಸ್ ಶಾಲೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದರು.
ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎನ್.ಗೋಪಾಲ್ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಎರಡೂ ಉತ್ತಮ ಸಮಾಜ ನಿರ್ಮಾಣದ ಪ್ರಮುಖ ಆಧಾರಸ್ತಂಭಗಳಾಗಿವೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣದ ಜತೆಗೆ ಕ್ರೀಡೆ ಮತ್ತು ಆರೋಗ್ಯಕ್ಕೂ ಸಮಾನ ಆದ್ಯತೆ ನೀಡಬೇಕು. ಕ್ರೀಡೆ ಕೇವಲ ಮನರಂಜನೆಯ ಸಾಧನವಲ್ಲ. ಅದು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸೋಲುಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸುತ್ತದೆ ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎನ್. ಲೋಕೇಶ್ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಬೇಕು. ನಿಯಮಿತವಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಕ್ಷಮತೆ ಹೆಚ್ಚುವುದರ ಜತೆಗೆ ಏಕಾಗ್ರತೆ ಮತ್ತು ಕಲಿಕೆಯ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ಕ್ರೀಡಾಕೂಟದಲ್ಲಿ ಗೆಲುವು ಸಾಧಿಸುವುದಕ್ಕಿಂತ ಶಿಸ್ತುಬದ್ಧವಾಗಿ ಭಾಗವಹಿಸುವುದು ಮತ್ತು ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಮುಖ್ಯ. ಸೋಲು ಎದುರಾದಾಗ ನಿರಾಶರಾಗದೆ, ಅದನ್ನು ಮುಂದಿನ ಗೆಲುವಿಗೆ ಮೆಟ್ಟಿಲಾಗಿ ಪರಿಗಣಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಗ್ರಾಪಂ ಮಾಜಿ ಅಧ್ಯಕ್ಷ ಅಫ್ತಾಬ್ ಪಾಷಾ, ಪಿಎಸೈ ನವೀನ್, ಕ್ಷೇತ್ರ ಶಿಕ್ಷಣಾಧಿಕಾರಿ ಸತೀಶ್, ಬಿಆರ್‌ಸಿ ಅನಿಲ್, ಇಸಿಒ ಯಾದವರಾಜ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಪಿ.ಟಿ.ಮಂಜೇಶ್, ಜಿಲ್ಲಾ ಕಾರ್ಯದರ್ಶಿ ವಿ.ಜಿ.ದೇವೇಗೌಡ, ಖಜಾಂಚಿ ಅಣ್ಣಪ್ಪ, ಅಕ್ಷರ ದಾಸೋಹ ಅಧಿಕಾರಿ ಉಮಾಶಂಕರ್ ಇದ್ದರು.
ಕ್ರೀಡಾಕೂಟದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದು, ವಿವಿಧ ಕ್ರೀಡಾ ಸ್ಪರ್ಧೆಗಳು ಗಮನ ಸೆಳೆದವು. ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸಿದ್ದರು.