ಶಾಂತಲಾ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವದ ಕಾರ್ಯುಕ್ರಮದಲ್ಲಿ ಮೈಸೂರಿನ ವಕೀಲ ದಿನಕರ್ ಅವರನ್ನು ಸನ್ಮಾನಿಸಲಾಯಿತು. ಉಷಾ ಸತೀಶ್, ಎಚ್.ಸಿ.ಸುರೇಶ್, ಶಿವಶಂಕರ್ ಇದ್ದರು.
ಬೇಲೂರು: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪಠ್ಯ ಎಷ್ಟು ಮುಖ್ಯವೋ ಹಾಗೆ ಕ್ರೀಡೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆ ಅತ್ಯಗತ್ಯ ಎಂದು ಶಾಂತಲಾ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಕೆ.ಭಗವಾನ್ ಹೇಳಿದರು.
ಪಟ್ಟಣದ ಶಾಂತಲಾ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯುಕ್ರಮ ಉದ್ಘಾಟಿಸಿ ಮಾತನಾಡಿದರು.
ಶಾಲೆಗಳು ಮಕ್ಕಳಿಗೆ ಪಠ್ಯದ ಶಿಕ್ಷಣದೊಂದಿಗೆ ಅವರಲ್ಲಿ ಆತ್ಮವಿಶ್ವಾಸ, ಶಿಸ್ತು ಸಂಯಮ, ಕ್ರೀಡೆ, ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಶಿಕ್ಷಕರು ಮಕ್ಕಳ ಪ್ರತಿಭೆಗೆ ಅನುಗುಣವಾಗಿ ಅವರಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಮುಂದುವರಿಯಲು ಪ್ರೋತ್ಸಾಹ ನೀಡಬೇಕು. ಜತೆಗೆ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸಂಸ್ಥೆ ಸದಾ ಬದ್ಧವಾಗಿದೆ. ಶಿಕ್ಷಕರ ಶ್ರಮ, ಪಾಲಕರ ಸಹಕಾರ ಮತ್ತು ವಿದ್ಯಾರ್ಥಿಗಳ ಆಸಕ್ತಿ ಶಾಲೆಯ ಪ್ರಗತಿಗೆ ಮೂಲ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಉತ್ತೇಜಿಸುವ ಇನ್ನಷ್ಟು ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಶಾಂತಲಾ ವಿದ್ಯಾ ಸಂಸ್ಥೆ ಕಾರ್ಯದರ್ಶಿ ತೊ.ಚ.ಅನಂತ ಸುಬ್ಬರಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ನಮ್ಮ ವಿದ್ಯಾ ಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ. ಮತ್ತು ಶೈಕ್ಷಣಿಕ, ಕ್ರೀಡೆ ಹಾಗೂ ಸಾಹಿತ್ಯ ಚಟುವಟಿಕೆಗಳನ್ನು ಆಯೋಜಿಸುತ್ತಿದೆ. ಶಾಲಾ ವಾರ್ಷಿಕೋತ್ಸವದಂತಹ ಕಾರ್ಯಕ್ರಮಗಳು ಮಕ್ಕಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆ ಎಂದರು.