ಕಾಫಿ ಬೆಳೆಗಾರರಿಗೆ ಭಾರಿ ಹಾನಿ

ಮಾಜಿ ಸಚಿವ ಎಚ್.ಕೆ ಕುಮಾರಸ್ವಾಮಿ
ಮಾಜಿ ಸಚಿವ ಎಚ್.ಕೆ ಕುಮಾರಸ್ವಾಮಿ
Published on

ಪ್ರಮುಖ ಮುಖ್ಯಾಂಶಗಳು

  • ನೆರವಿಗೆ ಧಾವಿಸಲು ಮಾಜಿ ಸಚಿವ ಎಚ್.ಕೆ ಕುಮಾರಸ್ವಾಮಿ ಒತ್ತಾಯ
ಸಕಲೇಶಪುರ: ಅನಾವೃಷ್ಟಿ ಹಾಗೂ ಅತಿವೃಷ್ಟಿಯಿಂದ ಕಾಫಿ ಬೆಳೆಗೆ ಬಾರಿ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೇಂದ್ರ ಸರ್ಕಾರ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಮಾಜಿ ಸಚಿವ ಎಚ್.ಕೆ ಕುಮಾರಸ್ವಾಮಿ ಒತ್ತಾಯಿಸಿದರು.
ಸಕಾಲಕ್ಕೆ ಮುಂಗಾರು ಆಗಮಿಸದ ಕಾರಣ ಕಾಫಿ ಹೂವಾಗಲು ತೊಂದರೆಯಾಗಿದ್ದು, ಜುಲೈ ಮೊದಲ ವಾರದಲ್ಲಿ ಅಪಾರ ಪ್ರಮಾಣದಲ್ಲಿ ಅತಿವೃಷ್ಟಿಯಾಗಿದ್ದರಿಂದ ಬೆಳೆ ಸಾಕಷ್ಟು ಧರೆ ಸೇರುವ ಮೂಲಕ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಕಾಫಿ ತೋಟಗಳ ಸಮೀಕ್ಷೆ ನಡೆಸಿ ವೈಜ್ಞಾನಿಕ ಪರಿಹಾರ ನೀಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಗಮನ ಸೆಳೆಯಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅತಿಯಾದ ಮಳೆಯಿಂದ ತಾಲೂಕಿನಲ್ಲಿ ಸಾಕಷ್ಟು ವಿದ್ಯುತ್ ಕಂಬಗಳು ಧರೆಗುರುಳಿರುವ ಪರಿಣಾಮ ವಾರದಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಇಲ್ಲ. ವಿದ್ಯುತ್ ಕಂಬಗಳನ್ನು ದುರಸ್ತಿಪಡಿಸಲು ಸಿಬ್ಬಂದಿ ಕೊರತೆ ಇದೆ ಎನ್ನಲಾಗುತ್ತಿದೆ. ಆದರೆ ಜಿಲ್ಲೆಯ ಹಲವೆಡೆ ಇದುವರೆಗೆ ಮಳೆಯೇ ಆಗಿಲ್ಲ. ಅಲ್ಲಿರುವ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಸಕಾಲಕ್ಕೆ ವಿದ್ಯುತ್ ನೀಡಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿರುವ ತಾಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ. ಅಲ್ಲದೆ ಸೆಸ್ಕ್, ಅರಣ್ಯ ಹಾಗೂ ಲೋಕಪಯೋಗಿ ಇಲಾಖೆಯ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ ಎಂದು ದೂರಿದರು.
ಪಟ್ಟಣದ ಸುಬಾಷ್ ಮೈದಾನದಲ್ಲಿ ಕಳೆದ ಮೂರು ವರ್ಷಗಳಿಂದ ಹಾಕಲಾಗಿರುವ ಕಸದ ರಾಶಿ ತೆರವುಗೊಳಿಸದೆ, ಸ್ಥಳೀಯರು ಸಮಸ್ಯೆ ಎದುರಿಸುತ್ತಿದ್ದಾರೆ. ಕಸದ ರಾಶಿ ತೆರವುಗೊಳಿಸುವುದಾಗಿ ಹೇಳಿದ್ದ ರಾಜಕೀಯ ನಾಯಕರು, ಈ ಬಗ್ಗೆ ಉತ್ತರಿಸಬೇಕು ಎಂದರು.
ಈ ವೇಳೆ ಜೆಡಿಎಸ್ ಮುಖಂಡರಾದ ಪ್ರಜ್ವಲ್, ಕರಗೂರು ರಮೇಶ್, ಉದಯ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net