ಬದುಕಿಗೆ ಹೊಸ ದಾರಿ ತೋರಿದ ಸಾವಿತ್ರಿಬಾಯಿ ಫುಲೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು.
Published on
ಬೇಲೂರು: ಮಹಿಳೆಯರು ಇಂದು ಶಿಕ್ಷಣ, ರಾಜಕೀಯ, ಸಮಾಜ ಸೇವೆ, ಆರೋಗ್ಯ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ತಾಲೂಕು ಘಟಕದಿಂದ ಇತ್ತೀಚೆಗೆ ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ಸಾವಿತ್ರಿಬಾಯಿ ಫುಲೆ ಸಾಧಕಿಯರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸಾಕಷ್ಟು ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡುತ್ತಿರುವುದು ಶ್ಲಾಘನೀಯ. ಇದು ಸಮಾಜದ ಅಭಿವೃದ್ಧಿಗೆ ಅತ್ಯಂತ ಸಂತೋಷದ ಸಂಗತಿಯಾಗಿದೆ. ಮಹಿಳಾ ಶಿಕ್ಷಣದ ಮಹತ್ವವನ್ನು ದೇಶಕ್ಕೆ ಪರಿಚಯಿಸಿದ ಮಹಾನ್ ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆ ಅವರ ಸೇವೆ ಮತ್ತು ಹೋರಾಟ ಸ್ಮರಣೀಯ ಎಂದು ಹೇಳಿದರು.
ಮಹಿಳೆಯರಿಗೆ ಶಿಕ್ಷಣ ಎಂಬುದು ಕಬ್ಬಿಣದ ಕಡಲೆಯಂತಾಗಿದ್ದ ಕಾಲದಲ್ಲಿ ದೇಶದಲ್ಲೇ ಪ್ರಥಮವಾಗಿ ಶಾಲೆಗಳನ್ನು ತೆರೆದು ಮಹಿಳೆಯರ ಬದುಕಿಗೆ ಹೊಸ ದಾರಿ ತೋರಿಸಿದ ಮೊದಲ ಶಿಕ್ಷಕಿ. ಮಹಿಳೆಯರು ಶಿಕ್ಷಣ ಪಡೆದಾಗ ಕುಟುಂಬ ಮಾತ್ರವಲ್ಲ ಸಮಗ್ರ ಸಮಾಜವೇ ಅಭಿವೃದ್ಧಿಯ ದಾರಿಯಲ್ಲಿ ಸಾಗುತ್ತದೆ ಎಂಬುದನ್ನು ಎಲ್ಲರೂ ಅರಿತು ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸ್ವಂತ ಕಾಲ ಮೇಲೆ ನಿಲ್ಲುವಂತೆ ಆತ್ಮಸ್ಥೈರ್ಯ ತುಂಬಬೇಕು ಎಂದರು.
ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಮಾತನಾಡಿ, ಮಹಿಳೆಯರಿಗೆ ಶಿಕ್ಷಣ ಮತ್ತು ಅವಕಾಶ ದೊರೆತರೆ ಸಮಾಜದಲ್ಲಿ ಮಹತ್ತರ ಬದಲಾವಣೆ ಸಾಧ್ಯ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಸಾಮರ್ಥ್ಯ ತೋರಿಸುತ್ತಿದ್ದು, ಇಂತಹ ಕಾರ್ಯಕ್ರಮಗಳು ಮಹಿಳೆಯರ ಸಾಧನೆಯನ್ನು ಗೌರವಿಸುವುದಕ್ಕೆ ಸಹಕಾರಿಯಾಗಿದೆ ಎಂದರು.
ಸಾವಿತ್ರಿಬಾಯಿ ಫುಲೆ ಸಂಘದ ತಾಲೂಕು ಅಧ್ಯಕ್ಷೆ ಸುಧಾ ಮಾತನಾಡಿ, ಸಮಾಜದಲ್ಲಿ ಮಹಿಳೆಯರಿಗೆ ಶಿಕ್ಷಣ ಮತ್ತು ಸಮಾನ ಹಕ್ಕುಗಳನ್ನು ನೀಡುವಲ್ಲಿ ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿಬಾ ಫುಲೆ ಅವರ ಕೊಡುಗೆ ಅಪಾರವಾಗಿದೆ. ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಿಕ್ಷಣಕ್ಕಾಗಿ ಮಾಡಿದ ಹೋರಾಟ ಮತ್ತು ತ್ಯಾಗ ಇಂದಿನ ಪೀಳಿಗೆಗೆ ಮಾದರಿಯಾಗಿದೆ. ಮಹಿಳೆಯರು ಶಿಕ್ಷಣದ ಮೂಲಕ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಬಿಆರ್‌ಸಿ ಶಿವಮರಿಯಪ್ಪ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸರೋಜಾ, ಶಕುಂತಲಾ, ಪಲ್ಲವಿ, ಡಾ.ಸುಮನಾ ಇತರರಿದ್ದರು. ಶಿಕ್ಷಣ, ಸಮಾಜ ಸೇವೆ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸಾವಿತ್ರಿಬಾಯಿ ಫುಲೆ ಸಾಧಕಿಯರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net