ಸಮಸ್ಯೆ ಪರಿಹಾರಕ್ಕೆ ‘ಜನಸ್ಪಂದನ’ ಸಹಕಾರಿ

ದುದ್ದ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಸಿ ಲತಾಕುಮಾರಿ ಜನಸಾಮಾನ್ಯರಿಂದ ಅಹವಾಲು ಸ್ವೀಕರಿಸಿದರು. ಎಚ್.ಕೆ.ಕೃಷ್ಣಮೂರ್ತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್, ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್, ತಹಸೀಲ್ದಾರ್ ಗೀತಾ ಇದ್ದರು.
ದುದ್ದ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಸಿ ಲತಾಕುಮಾರಿ ಜನಸಾಮಾನ್ಯರಿಂದ ಅಹವಾಲು ಸ್ವೀಕರಿಸಿದರು. ಎಚ್.ಕೆ.ಕೃಷ್ಣಮೂರ್ತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್, ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್, ತಹಸೀಲ್ದಾರ್ ಗೀತಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಮಸ್ಯೆ ಪರಿಹಾರಕ್ಕೆ ‘ಜನಸ್ಪಂದನ’ ಸಹಕಾರಿ
  • ಜಿಲ್ಲಾಧಿಕಾರಿ ಲತಾಕುಮಾರಿ ಅಭಿಮತ
  • ದುದ್ದ ಗ್ರಾಮದಲ್ಲಿ ಕಾರ್ಯಕ್ರಮ

ಹಾಸನ:

ಮುಖ್ಯಮಂತ್ರಿ ಅವರ ನಿರ್ದೇಶನದಂತೆ ತಿಂಗಳ ಮೊದಲ ಶನಿವಾರ ತಾಲೂಕು ಕಚೇರಿಯಲ್ಲಿ ಹಾಗೂ ಮೂರನೇ ಶನಿವಾರ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಹೋಬಳಿ ಕೇಂದ್ರದಲ್ಲಿ ನಡೆಸಲಾಗುತ್ತಿದ್ದು, ಸಾರ್ವಜನಿಕರಿಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದ್ದಾರೆ.

ದುದ್ದ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರವು ಸಾರ್ವಜನಿಕರ ಕುಂದು ಕೊರತೆಗಳ ನಿವಾರಣೆಗಾಗಿ ಪ್ರಜಾಸೇವಾ ಇಲಾಖೆ ಎಂದು ಪ್ರತ್ಯೇಕ ಸಚಿವಾಲಯವನ್ನು ಸೃಜಿಸಿದೆ ಎಂದು ತಿಳಿಸಿದರು.

ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಲಾಗುತ್ತಿತ್ತು. ಹೋಬಳಿಮಟ್ಟದಲ್ಲಿ ನಡೆಸಲು ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ದುದ್ದ ಹೋಬಳಿಯಿಂದ ಪ್ರಾರಂಭಿಸಲಾಗಿದೆ. ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದು, ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೂಳ್ಳಲು ಸಹಕಾರಿಯಾಗಿದೆ ಎಂದರು.
ಸಾರ್ವಜನಿಕರ ಸಮಸ್ಯೆಗಳ ತಾತ್ವಿಕ ಹಾಗೂ ಕಾನೂನಾತ್ಮಕ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು. ಜನರು ಸಮಸ್ಯೆಗಳನ್ನು ಹೊತ್ತು ಜಿಲ್ಲಾ ಹಾಗೂ ತಾಲೂಕು ಕಚೇರಿಗಳಿಗೆ ಬರುವುದರ ಬದಲಾಗಿ ಅಧಿಕಾರಿಗಳೇ ತಮ್ಮ ಬಳಿ ಬರುತ್ತಿರುವುದರಿಂದ ಸಾರ್ವಜನಿಕರಿಗೆ ನೆರವಾಗುತ್ತದೆ ಎಂದು ಹೇಳಿದರು.
ಖಾತೆ, ದುರಸ್ತಿ, ಸರ್ವೇ, ರಸ್ತೆ, ಸಾಗುವಳಿ ಚೀಟಿ, ಪರಿಹಾರ, ದಾರಿ ಒತ್ತುವರಿ, ಬಸ್ ನಿಲುಗಡೆ, ಬಸ್ ಸೌಲಭ್ಯ ಸೇರಿದಂತೆ ಒಟ್ಟು 55 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸದರಿ ಅರ್ಜಿಗಳ ವಿಲೇವಾರಿಯ ಪ್ರಗತಿ ಪರಿಶೀಲನೆ ಮತ್ತು ಸ್ಥಿತಿಗತಿಗಳನ್ನು ಮರುಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.
ಪ್ರೌಢಶಾಲೆಯ ಜಾಗ ಒತ್ತುವರಿ ಆಗಿರುವುದನ್ನು ತೆರವುಗೊಳಿಸಲು ಹಾಗೂ ಕಾಂಪೌಂಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಶಾಲಾ ಮಕ್ಕಳು ಎಲ್ಲಿಯೇ ಬಸ್‌ಗೆ ಕೈ ತೋರಿಸಿದರೂ ಬಸ್ ನಿಲ್ಲಿಸಿ ಮಕ್ಕಳನ್ನು ಹತ್ತಿಸಿಕೊಳ್ಳು ವಂತೆ ಒಂದು ಸುತ್ತೋಲೆ ಹೊರಡಿಸಲು ನಿರ್ದೇಶನ ನೀಡಿದರು.
ಜಿಲ್ಲಾಡಳಿತ ಜಿಲ್ಲೆಯನ್ನು ಹಸಿರು ಹಾಸನವನ್ನಾಗಿ ಮಾಡುವ ನಿಟ್ಟಿನಲ್ಲಿ 5 ಲಕ್ಷ ಮರದ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದ್ದು, ಈಗಾಗಲೇ 3.50 ಲಕ್ಷ ಗಿಡಗಳನ್ನು ನೆಡಲಾಗಿದೆ. ಕೆರೆ ಕುಂಟೆ, ಶಾಲಾ- ಕಾಲೇಜುಗಳ ಆವರಣದಲ್ಲಿ ಗಿಡಗಳನ್ನು ನೆಡಲು ಎಲ್ಲರೂ ಕೈಜೋಡಿಸುವ ಮೂಲಕ ಹೆಚ್ಚಿನ ಪ್ರಗತಿಗೆ ಸಹಕಾರ ನೀಡುವಂತೆ ತಿಳಿಸಿದರು.
ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಈಗಾಗಲೇ ಮತಗಟ್ಟೆ ಅಧಿಕಾರಿಗಳು ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದಾರೆ. ನಮೂನೆಗಳನ್ನು ಭರ್ತಿ ಮಾಡುವುದು ಬಹಳ ಸರಳವಾಗಿದೆ. ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಮತಗಟ್ಟೆ ಅಧಿಕಾರಿಗಳ ಸಹಾಯ ಪಡೆದು ಎನ್ಯುಮರೇಷನ್ ನಮೂನೆಗಳನ್ನು ಭರ್ತಿ ಮಾಡಿ ಹಿಂದಿರುಗಿಸುವಂತೆ ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಶಾಲಾ ಆವರಣದಲ್ಲಿ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಗಿಡ ನೆಟ್ಟು ಇದೇ ಸಂದರ್ಭದಲ್ಲಿ ಸ್ಥಳದಲ್ಲಿಯೇ ಇದ್ದ ಶಾಲೆಯ ಮುಖ್ಯೋಪಾಧ್ಯಾಯರಿಗೆ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲು ಹಾಗೂ ಶಾಲಾ ಆವರಣಕ್ಕೆ ತಂತಿ ಬೇಲಿ ನಿರ್ಮಾಣಕ್ಕೆ ಕ್ರಮ ವಹಿಸಲು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್, ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್, ತಹಸೀಲ್ದಾರ್ ಗೀತಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net