ಪ್ರತಿ ವರ್ಷ ಉದ್ಯೋಗ ಮೇಳ ಗ್ಯಾರಂಟಿ

ಹಾಸನ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಯುವ ಉದ್ಯೋಗ ಮೇಳ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಶಿವಕಾಂತಮ್ಮ, ಡಿಸಿ ಕೆ.ಎಸ್. ಲತಾ ಕುಮಾರಿ, ಪಟೇಲ್ ಶಿವಪ್ಪ, ಪೂರ್ಣಿಮಾ, ಜಗದೀಶ್ ಗಂಗಣ್ಣ, ಗಿರೀಶ್ ಇತರರಿದ್ದರು.
ಹಾಸನ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಯುವ ಉದ್ಯೋಗ ಮೇಳ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಶಿವಕಾಂತಮ್ಮ, ಡಿಸಿ ಕೆ.ಎಸ್. ಲತಾ ಕುಮಾರಿ, ಪಟೇಲ್ ಶಿವಪ್ಪ, ಪೂರ್ಣಿಮಾ, ಜಗದೀಶ್ ಗಂಗಣ್ಣ, ಗಿರೀಶ್ ಇತರರಿದ್ದರು.
Published on
ಹಾಸನ: ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಯುವ ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದೆ. ಪ್ರತಿ ವರ್ಷವೂ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಯುವ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸುಮಾರು 150ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು, ಸಾವಿರಾರು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.
ಒಂದೇ ಸೂರಿನಡಿಯಲ್ಲಿ 150ಕ್ಕೂ ಹೆಚ್ಚು ಕಂಪನಿಗಳು ಆಗಮಿಸಿರುವುದರಿಂದ ಜಿಲ್ಲೆಯ ಎಲ್ಲ ಯುವಕ, ಯುವತಿಯರು ಆಗಮಿಸಿ ಮೇಳದ ಸದುಪಯೋಗ ಪಡೆದುಕೊಂಡು ತಮ್ಮ ಜೀವನವನ್ನು ಉತ್ತಮಪಡಿಸಿಕೊಳ್ಳಬೇಕು ಎಂದರು.
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ (ಕಾಂತಾ) ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ ಅವರ ಕೌಶಲಾಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದರು.
200ಕ್ಕೂ ಹೆಚ್ಚು ಕಂಪನಿಗಳು ನೋಂದಣಿ ಮಾಡಿಕೊಂಡಿದ್ದು, ಸುಮಾರು 180 ಕಂಪನಿಗಳು ಮೇಳದಲ್ಲಿ ಭಾಗವಹಿಸಿವೆ. ಇಂದಿನ ದಿನಗಳಲ್ಲಿ ಉದ್ಯೋಗ ಹುಡುಕುವುದಕ್ಕಿಂತ ಉದ್ಯೋಗ ಸೃಷ್ಟಿ ಮಾಡುವ ಮನೋಭಾವ ಯುವಕರಲ್ಲಿ ಬೆಳೆಯಬೇಕು ಎಂದು ಹೇಳಿದರು.
ಯುವಕರು ಮೊಬೈಲ್ ಬಳಕೆಯಿಂದ ದೂರವಿದ್ದು, ತಮ್ಮ ಕೌಶಲಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಕೌಶಲ ಇದ್ದರೆ ಉದ್ಯೋಗ ಸಿಗುವುದು ಸುಲಭ. ಉದ್ಯೋಗ ಸಿಗದ ಅಭ್ಯರ್ಥಿಗಳು ತರಬೇತಿ ಪಡೆದು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಶಾಸಕ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯೋಗ ಮೇಳದ ಮೂಲಕ ಹೆಚ್ಚಿನ ಯುವಕರಿಗೆ ಉದ್ಯೋಗ ದೊರೆಯಬೇಕು. ಕನಿಷ್ಠ ನೂರಕ್ಕೂ ಹೆಚ್ಚು ಜನರಿಗೆ ನೇರವಾಗಿ ಉದ್ಯೋಗ ಕಲ್ಪಿಸುವ ಗುರಿ ಹೊಂದಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಮಾತನಾಡಿ, ಉದ್ಯೋಗ ಮೇಳಕ್ಕೆ ಈಗಾಗಲೇ ಆನ್‌ಲೈನ್ ಮೂಲಕ ಸುಮಾರು 4 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಸ್ಥಳದಲ್ಲಿ 3 ಸಾವಿರ ಯುವಕ, ಯುವತಿಯರು ಭಾಗವಹಿಸಿದ್ದಾರೆ.
ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ, ಅಂಗವಿಕಲರಿಗೆ ಶೇಕಡ 5ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಮಕ್ಕಳು ಉತ್ತಮ ಉದ್ಯೋಗದಲ್ಲಿರಬೇಕು. ಆರ್ಥಿಕತೆ ವೃದ್ಧಿಸಿ ವೃದ್ಧಿಸಿಕೊಂಡು ದೇಶದ ಆರ್ಥಿಕತೆಗೆ ಕೊಡುಗೆ ನೀಡುವ ಮೂಲಕ ಪ್ರಗತಿ ಪರ ರಾಷ್ಟ್ರವನ್ನಾಗಿಸಬೇಕು. ಯುವ ಜನತೆ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಅಮೂಲ್ಯ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.
ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ ಮಾತನಾಡಿ, ಒಂದೇ ಸೂರಿನಡಿಯಲ್ಲಿ ಹಲವು ಕಂಪನಿಗಳು ಭಾಗವಹಿಸಿರುವುದು ಯುವಕರ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ. ಈ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಆಯ್ಕೆಯಾದ 5 ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಗಿರೀಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net