ಮಳೆಗಾಲ ಆರಂಭವಾಗಿರುವ ಹಿನ್ನಲೆಯಲ್ಲಿ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟಗಳ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಆದರೆ ಚಾರಣಕ್ಕೆ ಬರುವವರಿಗೆ ಎಲ್ಲಿಯೂ ಮುಕ್ತ ಅವಕಾಶ ಕಲ್ಪಿಸಿಲ್ಲ. ಪಟ್ಲ ಬೆಟ್ಟ, ಗವಿ ಬೆಟ್ಟ, ಹೊಸಳ್ಳಿ ಬೆಟ್ಟ, ಮೂರ್ಕಣ್ಣು ಗುಡ್ಡ ಸೇರಿ ಎಲ್ಲ ಪ್ರೇಕ್ಷಣೀಯ ಸ್ಥಳಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಚಾರಣ ಸ್ಥಳಗಳಲ್ಲಿ ಆನ್‌ಲೈನ್ ಟಿಕೆಟ್ ವ್ಯವಸ್ಥೆ, ಅರಣ್ಯ ಹಾಗೂ ಕಂದಾಯ ಇಲಾಖೆಯಿಂದಲೇ ವಾಹನ ವ್ಯವಸ್ಥೆ ಮಾಡುವ ಭರವಸೆಯನ್ನು ಜಿಲ್ಲಾಡಳಿತ ನೀಡಿತ್ತು. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಸಭೆಗಳನ್ನು ನಡೆಸಿದ್ದರು. ಆದರೆ ಯಾವುದೂ ಕಾರ್ಯರೂಪಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯ ಇಳಿಕೆಯಾಗಿದೆ. ನಾಲ್ಕೈದು ಕಿ.ಮೀ. ಕಾಲ್ನಡಿಗೆಯಲ್ಲಿ ಹೋಗಲು ಆಗದ ಪ್ರವಾಸಿಗರು ಸುಂದರ ತಾಣಗಳನ್ನು ನೋಡುವ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಇದು ಸ್ಥಳೀಯ ಪ್ರವಾಸೋದ್ಯಮ ಬೆಳವಣಿಗೆ ಮೇಲೆ ಭಾರಿ ಪರಿಣಾಮ ಬೀರಿದೆ. ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ಹಿನ್ನೆಲೆಯಲ್ಲಿ ಮಂಜ್ರಾಬಾದ್ ಕೋಟೆ ವೀಕ್ಷಣೆಗೂ ಜನರ ಸಂಖ್ಯೆ ಕಡಿಮೆಯಾಗಿದೆ.