ಸ್ವಾತಂತ್ರೃ ದಿನಾಚರಣೆ ಅರ್ಥಪೂರ್ಣವಾಗಿರಲಿ

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಸಭೆಯಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿದರು ಜಿ.ಎಸ್. ಶಂಕರಪ್ಪ, ಜಿ.ಆರ್.ಹರೀಶ್, ಹಡೇನಹಳ್ಳಿ ಲೋಕೇಶ್ ಇತರರು ಇದ್ದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಸಭೆಯಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿದರು ಜಿ.ಎಸ್. ಶಂಕರಪ್ಪ, ಜಿ.ಆರ್.ಹರೀಶ್, ಹಡೇನಹಳ್ಳಿ ಲೋಕೇಶ್ ಇತರರು ಇದ್ದರು.
Published on
ಚನ್ನರಾಯಪಟ್ಟಣ: 79ನೇ ಸ್ವಾತಂತ್ರೃ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು. ಈ ನಿಟ್ಟಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು, ಯಾವುದೇ ಅಚಾತುರ್ಯ ಉಂಟಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಅಧಿಕಾರಿಗಳಿಗೆ ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮುಖಂಡರ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿದರು.
ವೇದಿಕೆ ಕಾರ್ಯಕ್ರಮ ಅಚ್ಚುಕಟ್ಟಾಗಿರಬೇಕು. ಮಳೆ ಹಾಗೂ ಬಿಸಿಲಿನಿಂದ ರಕ್ಷಣೆ, ಶಾಲಾ ಮಕ್ಕಳಿಗೆ ಗುಣಮಟ್ಟದ ಉಪಹಾರ ಹಾಗೂ ಶುದ್ಧವಾದ ಬಾಟಲ್ ಕುಡಿಯುವ ನೀರನ್ನು ಒದಗಿಸಬೇಕು. ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ಯೋಧರು, ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರು ಸೇರಿದಂತೆ ಎಲ್ಲರಿಗೂ ಸಮರ್ಪಕವಾಗಿ ಆಸನ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಎಲ್ಲ ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಪ್ರತಿಯೊಂದು ಇಲಾಖೆಯವರು ತಮ್ಮ ಇಲಾಖೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಟ್ಟು ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನೆರವೇರಿಸಬೇಕು. ಬಳಿಕ ತಾಲೂಕು ಕ್ರೀಡಾಂಗಣದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು.
ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ತಾಲೂಕು ಕ್ರೀಡಾಂಗಣದವರೆಗೂ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾರ್ಯಕ್ರಮ ಮುಗಿದ ನಂತರ ವಿದ್ಯಾರ್ಥಿಗಳು ತೆರಳಲು ಖಾಸಗಿ ಶಾಲೆಗಳ ಬಸ್‌ಗಳನ್ನು ಬಳಸಿಕೊಳ್ಳುವಂತೆ ಸೂಚಿಸಿದರು. ಪೊಲೀಸ್ ಇಲಾಖೆಯು ಪರೇಡ್ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಉಳಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ತಂಡಗಳಿಗೆ ಪೂರ್ವಭಾವಿ ತರಬೇತಿ ನೀಡಿ ಸಜ್ಜುಗೊಳಿಸಬೇಕು. ಸ್ವಾತಂತ್ರುೃತ್ಸವ ಸಮಾರಂಭದ ವೇಳೆ ಅಗತ್ಯ ವೈದ್ಯಕೀಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸಿರುವ ಸಾಧಕರಿಗೆ ಸನ್ಮಾನ ವಿಚಾರದಲ್ಲಿ ಲೋಪ ಉಂಟಾಗದಂತೆ ಹಾಗೂ ಯಾವುದೇ ಒತ್ತಡಕ್ಕೆ ಮಣಿಯದೆ ಅರ್ಹರನ್ನು ಸನ್ಮಾನಿಸಬೇಕಿದೆ. ಸಮಾರಂಭವನ್ನು ಶಿಸ್ತುಬದ್ಧವಾಗಿ ಅರ್ಥಪೂರ್ಣವಾಗಿ ಆಚರಿಸುವಂತೆ ವಿವಿಧ ಸಂಘಟನೆಯ ಕಾರ್ಯಕರ್ತರು ಸಲಹೆ ನೀಡಿದರು.
ಸ್ವಾತ್ರಂತ್ರುೃತ್ಸವ ಆಚರಣೆ ಕುರಿತು ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಿ. ಎಲ್ಲ ಸಮಿತಿಗಳು ತಮಗೆ ನೀಡಿರುವ ಜವಾಬ್ದಾರಿಯನ್ನು ಪರಸ್ಪರ ಸಮನ್ವಯದಿಂದ, ಸಮರ್ಪಕವಾಗಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ತಾಕೀತು ಮಾಡಿದರು.
ಸಭೆಯಲ್ಲಿ ತಹಸೀಲ್ದಾರ್ ಜೆ.ಎಸ್.ಶಂಕರಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್.ಹರೀಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಆರ್.ತ್ಯಾಗರಾಜು, ಸಿಡಿಪಿಒ ಎಂ.ಪಿ.ದಿನೇಶ್, ಬಿಆರ್‌ಸಿ ಕೆ.ಎನ್.ಅನಿಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಹರೀಶ್, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಧರಣೀಶ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್, ಪರಿಸರ ಪ್ರೇಮಿ ಚ.ನಾ.ಅಶೋಕ್, ಕೆಡಿಪಿ ಸದಸ್ಯರಾದ ಮಹೇಶ್ ಕಬ್ಬಾಳು, ಯೋಗೀಶ್ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net