ಆರೋಗ್ಯವಂತ ಜೀವನ ಶೈಲಿ ನಮ್ಮದಾಗಲಿ

ಹಾಸನ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆಯೋಜಿಸಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಗಣ್ಯರು ಯೋಗಾಭ್ಯಾಸ ಮಾಡಿದರು. ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಸಿಇಒ ಶುಭಂ ಶುಕ್ಲಾ, ರಾಜ್ಯ ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಕೃಷ್ಣೇಗೌಡ ಇತರರಿದ್ದರು.
ಹಾಸನ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆಯೋಜಿಸಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಗಣ್ಯರು ಯೋಗಾಭ್ಯಾಸ ಮಾಡಿದರು. ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಸಿಇಒ ಶುಭಂ ಶುಕ್ಲಾ, ರಾಜ್ಯ ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಕೃಷ್ಣೇಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯವಂತ ಜೀವನ ಶೈಲಿ ನಮ್ಮದಾಗಲಿ
  • ಸಂಸದ ಶ್ರೇಯಸ್ ಪಟೇಲ್ ಆಶಯ
ಹಾಸನ: ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಯೋಗ ಪ್ರಮುಖ ಪಾತ್ರವಹಿಸಲಿದ್ದು, ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸ ಮಾಡಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಮಹಾನಗರ ಪಾಲಿಕೆ ಮತ್ತು ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಸದಾ ಒತ್ತಡದಲ್ಲಿ ಬದುಕುತ್ತಿರುವ ಎಲ್ಲ ವಯೋಮಾನದವರಿಗೂ ಯೋಗ ಬಹಳ ಮುಖ್ಯ. ಪ್ರತಿದಿನ ಕನಿಷ್ಠ ಒಂದು ಗಂಟೆ ಯೋಗ ಮಾಡಿದರೆ ಆರೋಗ್ಯವಂತ ಜೀವನ ಶೈಲಿ ನಮ್ಮದಾಗುತ್ತದೆ ಎಂದರು.
ಶಾಸಕ ಸ್ವರೂಪ ಪ್ರಕಾಶ್ ಮಾತನಾಡಿ, ಆಸ್ತಿ ಎಷ್ಟೇ ಸಂಪಾದಿಸಿದರೂ ಉತ್ತಮ ಆರೋಗ್ಯ ಬಹುಮುಖ್ಯ. ಈ ನಿಟ್ಟಿನಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಪ್ರತಿದಿನ ಯೋಗಾಭ್ಯಾಸ ಮಾಡಬೇಕು ಎಂದು ತಿಳಿಸಿದರು.
ದೇಶದಲ್ಲಿ ಹಲವಾರು ಯೋಗ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಯೋಗವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದೆ ಎಂದರು.
ಜಿಲ್ಲಾಧಿಕಾರಿ ಲತಾ ಕುಮಾರಿ ಮಾತನಾಡಿ, ಉತ್ತಮ ಆರೋಗ್ಯ, ಜೀವನ ಹಾಗೂ ವೃದ್ಧಾಪ್ಯಕ್ಕಾಗಿ ಯೋಗಾಭ್ಯಾಸ ಅತ್ಯವಶ್ಯ. ಈ ನಿಟ್ಟಿನಲ್ಲಿ ಎಲ್ಲರೂ ಯೋಗಾಭ್ಯಾಸ ಮಾಡುವ ಮೂಲಕ ಉತ್ತಮ ಆರೋಗ್ಯ ಪಡೆಯೋಣ ಎಂದು ತಿಳಿಸಿದರು.
ಆರೋಗ್ಯಕರ ಜೀವನ ಉಳಿಸಿಕೊಳ್ಳದ ಕಾರಣ 50 ರಿಂದ 60 ವರ್ಷವಾದರೆ ಮಧುಮೇಹ, ರಕ್ತದೊತ್ತಡ ಮತ್ತಿತರ ರೋಗಗಳು ಕಾಣಿಸಿಕೊಳ್ಳುತ್ತವೆ. ಜೀವನ ಚೆನ್ನಾಗಿರುವಂತೆ ನೋಡಿಕೊಳ್ಳಲು ಪ್ರತಿದಿನ ಯೋಗಾಭ್ಯಾಸ ಮಾಡುವುದನ್ನು ತಪ್ಪದೆ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಡೆದ ಯೋಗಾಸನಗಳ ಪ್ರದರ್ಶನದಲ್ಲಿ ಸಂಸದರಾದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ, ರಾಜ್ಯ ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಕೃಷ್ಣೇಗೌಡ ಸೇರಿದಂತೆ ಮತ್ತಿತರರು ಪಾಲ್ಗೊಂಡರು. ಬಳಿಕ ಕ್ರೀಡಾಂಗಣದ ಆವರಣದಲ್ಲಿ ಗಿಡ ನೆಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net