ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊಟ ನೀಡದಿದ್ದಕ್ಕೆ ಆಕ್ರೋಶ

ಹಾಸನ ನಗರದ ಆಕಾಶವಾಣಿ ಹಿಂಭಾಗದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ರಾತ್ರಿ ಊಟ ನೀಡದ ಆರೋಪ ಹಿನ್ನೆಲೆ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.
ಹಾಸನ ನಗರದ ಆಕಾಶವಾಣಿ ಹಿಂಭಾಗದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ರಾತ್ರಿ ಊಟ ನೀಡದ ಆರೋಪ ಹಿನ್ನೆಲೆ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊಟ ನೀಡದಿದ್ದಕ್ಕೆ ಆಕ್ರೋಶ
  • ವಾರ್ಡನ್ ವಿರುದ್ಧ ಅಹೋರಾತ್ರಿ ಧರಣಿ
ಹಾಸನ: ನಗರದ ಆಕಾಶವಾಣಿ ಹಿಂಭಾಗದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ರಾತ್ರಿ ಊಟ ನೀಡದ ಆರೋಪ ಹಿನ್ನೆಲೆಯಲ್ಲಿ ವಾರ್ಡನ್ ವಿರುದ್ಧ ಮಂಗಳವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಹಲವಾರು ದಿನಗಳಿಂದ ವಿದ್ಯಾರ್ಥಿಗಳಿಗೆ ಕಳಪೆ ಆಹಾರ ನೀಡಲಾಗುತ್ತಿದೆ. ಸರಿಯಾದ ವ್ಯವಸ್ಥೆ ಇಲ್ಲ ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ ಎಂದು ಆರೋಪಿಸಿದರು.
ಮಂಗಳವಾರ ರಾತ್ರಿ ಹೆಚ್ಚುವರಿ ಸುಮಾರು 20 ವಿದ್ಯಾರ್ಥಿಗಳಿಗೆ ಊಟ ನೀಡಲು ವಾರ್ಡನ್ ನಿರಾಕರಿಸಿದರು. ಊಟ ಕೇಳಿದಾಗ ತಮಗೆ ಧಮ್ಕಿ ಹಾಕಲಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಬೇಸತ್ತ ವಿದ್ಯಾರ್ಥಿಗಳು ಹಾಸ್ಟೆಲ್ ಆವರಣದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದರು.
ಗ್ಯಾಸ್ ಕೊರತೆಯಿಂದ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಊಟ ನೀಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಆದರೆ ಇದು ಕಾರಣ ಅಷ್ಟೇ, ಹಾಸ್ಟೆಲ್‌ನಲ್ಲಿರುವ ಎಲ್ಲ ವಿದ್ಯಾರ್ಥಿಗಳಿಗೆ ಸಮರ್ಪಕ ಆಹಾರ ಮತ್ತು ಮೂಲ ಸೌಲಭ್ಯ ಒದಗಿಸುವುದು ಆಡಳಿತದ ಕರ್ತವ್ಯವಾಗಿದ್ದು, ಈ ರೀತಿಯ ನಿರ್ಲಕ್ಷ್ಯ ಅಕ್ಷಮ್ಯ ಎಂದು ಕಿಡಿಕಾರಿದರು.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಬಿಸಿಎಂ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಸ್ಥಿತಿ ಸಮಾಧಾನಪಡಿಸಲು ಪ್ರಯತ್ನಿಸಿದರು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ವಿವರವಾಗಿ ಆಲಿಸಿ, ಘಟನೆ ಕುರಿತು ಸಮಗ್ರ ಪರಿಶೀಲನೆ ನಡೆಸುತ್ತೇವೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹಾಸ್ಟೆಲ್‌ನಲ್ಲಿ ಆಹಾರ ವಿತರಣೆ, ಸೌಲಭ್ಯಗಳ ನಿರ್ವಹಣೆ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಲಾಯಿತು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ವಾರ್ಡನ್ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿಗಳ ಹಿತರಕ್ಷಣೆಯೇ ಇಲಾಖೆಯ ಪ್ರಮುಖ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಬೇಡಿಕೆ ಇಟ್ಟಿರುವ ಎಲ್ಲ ಮೂಲ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಸಮರ್ಪಕವಾಗಿ ಒದಗಿಸಲಾಗುವುದು.
ಕುಮಾರ್
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net