ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್-ಯುಜಿ-2026 ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ವಿರುದ್ಧ ಪ್ರತಿಭಟನೆ ನಡೆಯಿತು. ಸಂಸದ ಶ್ರೇಯಸ್ ಎಂ.ಪಟೇಲ್, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್, ದೇವರಾಜೇಗೌಡ, ತಾರಾ ಚಂದನ್, ರಘು ದಾಸರ ಕೊಪ್ಪಲು, ರಾಮಚಂದ್ರ, ಇಸ್ಮಾಯಿಲ್ ಇತರರಿದ್ದರು.
ಸಂಸದ ಶ್ರೇಯಸ್ ಎಂ.ಪಟೇಲ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಧರಣೆ
ಹಾಸನ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್-ಯುಜಿ-2026 ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂಸದ ಶ್ರೇಯಸ್ ಎಂ.ಪಟೇಲ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಡಿಸಿ ಕಚೇರಿ ಎದುರಿರುವ ಅಂಬೇಡ್ಕರ್ ಪ್ರತಿಮೆ ಬಳಿ ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು, ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಮುಂದೇನು ಎಂಬ ಆತಂಕ ಉಂಟಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಉನ್ನತಮಟ್ಟದ ತನಿಖೆ ನಡೆಸಬೇಕು. ನೊಂದ ಮಕ್ಕಳಿಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರಿಗೆ ತಕ್ಕ ಶಾಸ್ತಿಯಾಗಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಶ್ರೇಯಸ್ ಪಟೇಲ್, ವೈದ್ಯಕೀಯ, ದಂತವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಪ್ರವೇಶ ಪಡೆಯಲು ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಹಲವು ವರ್ಷಗಳ ಕಾಲ ಕಠಿಣ ಪರಿಶ್ರಮದೊಂದಿಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪರೀಕ್ಷೆಯ ಪಾವಿತ್ರೃಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಗಂಭೀರ ಆರೋಪಗಳು ಕೇಳಿ ಬಂದಿರುವುದು ದುರದೃಷ್ಟಕರ. ಇದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಾಢ ಪರಿಣಾಮ ಬೀರಿದೆ ಎಂದು ಬೇಸರ ಹೊರ ಹಾಕಿದರು.
ಸುಮಾರು 23 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಬರೆದ ಪರೀಕ್ಷೆ ರದ್ದಾಗಿ, ಇದೀಗ ಜೂ.21 ಕ್ಕೆ ಮರು ನಿಗದಿಯಾಗಿದೆ. ಆದರೆ ವಿದ್ಯಾರ್ಥಿಗಳು ಮಾನಸಿಕ ಒತ್ತಡ, ಅನಿಶ್ಚಿತತೆ ಮತ್ತು ಭವಿಷ್ಯದ ಆತಂಕ ಎದುರಿಸುವಂತಾಗಿದೆ. ಹಲವು ರೀತಿಯ ಗೊಂದಲ ವಿದ್ಯಾರ್ಥಿಗಳು ಮತ್ತು ಕಾಲಕರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ ಎಂದು ದೂರಿದರು.
ಇದರ ಜತೆಗೆ, ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸಮಗ್ರವಾಗಿ ಪರಿಶೀಲಿಸಿ. ಭವಿಷ್ಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಇಂತಹ ಅಕ್ರಮಗಳು ಮರುಕಳಿಸದಂತೆ ಅತ್ಯಾಧುನಿಕ ಭದ್ರತಾ ಕ್ರಮ ಜಾರಿಗೊಳಿಸಬೇಕು. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಶೈಕ್ಷಣಿಕ ಭವಿಷ್ಯ ಗಮನದಲ್ಲಿಟ್ಟುಕೊಂಡು ಸೂಕ್ತ ಬೆಂಬಲ ವ್ಯವಸ್ಥೆ ಕಲ್ಪಿಸುವುದರ ಜತೆಗೆ, ಪರೀಕ್ಷೆ ನಡೆಸುವ ಸಂಸ್ಥೆಗಳನ್ನು ಪುನರ್ ರಚಿಸಿ ಸಂಪೂರ್ಣ ಪಾರದರ್ಶಕ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ರೂಪಿಸುವ ಅಗತ್ಯವಿದೆ ಎಂದು ಹೇಳಿದರು.
ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆ ಉಳಿಸಿಕೊಳ್ಳುವ ದೃಷ್ಟಿಯಿಂದ ಕೇಂದ್ರ ಸರ್ಕಾರ ತ್ವರಿತ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಹಗರಣದ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು. ನಂತರ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಯಿತು.